ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಆನೆಗಳ ನಡುವಿನ ಘರ್ಷಣೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಸಾಕಾನೆ ಮೃತಪಟ್ಟಿರುವ ಘಟನೆಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಸಚಿವರು, ಅನಿರೀಕ್ಷಿತವಾದ ಮತ್ತು ಊಹಿಸಲೂ ಆಗದ ಈ ದುರ್ಘಟನೆಯಲ್ಲಿ ಪ್ರವಾಸಿ ಮಹಿಳೆಯೊಬ್ಬರು ಹಾಗೂ ಒಂದು ಸಾಕಾನೆ ಮೃತಪಟ್ಟಿರುವುದು ಅತ್ಯಂತ ದುಃಖದ ಸಂಗತಿ ಎಂದು ತಿಳಿಸಿದ್ದಾರೆ. ಇದೇ ವೇಳೆ, ಹಾಸನ ಜಿಲ್ಲೆಯ ಯಸಳೂರಿನ ಬಳಿ 2014ರಲ್ಲಿ ಸೆರೆ ಹಿಡಿಯಲಾಗಿದ್ದ 26 ವರ್ಷದ ‘ಕಂಜನ್’ ಆನೆಯು ಈ ಹಿಂದೆ ಮೂರು ಬಾರಿ ದಸರಾ ಮಹೋತ್ಸವದಲ್ಲಿ ಭಾಗವಹಿಸಿತ್ತು. ಆದರೆ, ಈ ದುರ್ಘಟನೆಯ ಹಿನ್ನೆಲೆಯಲ್ಲಿ ಇನ್ನು ಮುಂದೆ ದಸರಾ ಮಹೋತ್ಸವಕ್ಕೆ ಈ ಆನೆಯನ್ನು ಬಳಸದಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಚಿವರು ಸ್ಪಷ್ಟಪಡಿಸಿದ್ದಾರೆ.
ದುಬಾರೆ ಘಟನೆಯಿಂದ ಆತಂಕ
ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ನಡುವಿನ ಕಾಳಗದಲ್ಲಿ 34 ವರ್ಷದ ಮಾರ್ತಾಂಡ ಆನೆಗೆ ಗಂಭೀರ ಗಾಯಗಳಾಗಿದ್ದವು. ಚಿಕಿತ್ಸೆ ನೀಡಲಾಗುತ್ತಿದ್ದರೂ ಅದು ಫಲಕಾರಿಯಾಗದೆ ಮೃತಪಟ್ಟಿದೆ. ಘಟನೆಯ ವೇಳೆ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಆನೆಗಳ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದರು. ಈ ಘಟನೆ ರಾಜ್ಯಾದ್ಯಂತ ಆತಂಕಕ್ಕೆ ಕಾರಣವಾಗಿತ್ತು. ಹಾಸನ ಜಿಲ್ಲೆಯ ಯಸಳೂರಿನ ಬಳಿ 2014ರಲ್ಲಿ ಸೆರೆ ಹಿಡಿಯಲಾಗಿದ್ದ 26 ವರ್ಷದ ‘ಕಂಜನ್’ ಆನೆ ಈ ಹಿಂದೆ ಮೂರು ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸಿತ್ತು. ಆದರೆ ಇತ್ತೀಚಿನ ದುರ್ಘಟನೆಯ ಹಿನ್ನೆಲೆಯಲ್ಲಿ ಇನ್ನು ಮುಂದೆ ದಸರಾ ಮಹೋತ್ಸವದಲ್ಲಿ ಕಂಜನ್ ಆನೆಯನ್ನು ಬಳಸಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಖಂಡ್ರೆ ತಿಳಿಸಿದ್ದಾರೆ.
ಭದ್ರತಾ ಕ್ರಮಗಳ ಪರಿಶೀಲನೆ
ದುಬಾರೆ ಶಿಬಿರದಲ್ಲಿ ಸಂಭವಿಸಿದ ಘಟನೆ ಬಳಿಕ ಸಾಕಾನೆಗಳ ನಿರ್ವಹಣೆ, ತರಬೇತಿ ಹಾಗೂ ಪ್ರವಾಸಿಗರ ಸುರಕ್ಷತಾ ಕ್ರಮಗಳ ಕುರಿತು ಅರಣ್ಯ ಇಲಾಖೆ ಪರಿಶೀಲನೆ ನಡೆಸುತ್ತಿದೆ. ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ದುಬಾರೆ ಆನೆ ಶಿಬಿರಕ್ಕೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.



