Tuesday, June 6, 2023

Latest Posts

ಕೊಡಗು: ಅರ್ಹ ಮಕ್ಕಳೆಲ್ಲರೂ ಲಸಿಕೆ ಪಡೆಯಬೇಕು – ಸಚಿವ ಕೋಟ ಶ್ರೀನಿವಾಸ ಪೂಜಾರಿ

ಹೊಸದಿಗಂತ ವರದಿ, ಕೊಡಗು:

ಕೊಡಗು ಜಿಲ್ಲೆಯಾದ್ಯಂತ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡುವ ಅಭಿಯಾನಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪಾಲಿಬೆಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲೆ ಬಳಿಯ ಮಹಿಳಾ ಸಮಾಜದಲ್ಲಿ ಸೋಮವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಸಚಿವರು, ಭಾರತ ಸರ್ಕಾರದಿಂದ ಲಸಿಕಾ ಅಭಿಯಾನ ಜಾರಿಗೊಳಿಸಿದ್ದು, ಅರ್ಹರೆಲ್ಲರೂ ಲಸಿಕೆ ಪಡೆಯಬೇಕು. ಯಾವುದೇ ಕಾರಣಕ್ಕೂ ಹಿಂಜರಿಯಬಾರದು. ಶಾಲಾ-ಕಾಲೇಜುಗಳಲ್ಲಿ ಅಥವಾ ಹತ್ತಿರದ ಕೋವಿಡ್ ಲಸಿಕಾ ಕೇಂದ್ರದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿ 15 ರಿಂದ 18 ವರ್ಷ ವಯಸ್ಸಿನ 26,049 ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಆರ್.ವೆಂಕಟೇಶ್ ಅವರು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಡಿಎಚ್‍ಒ ಡಾ.ಆರ್.ವೆಂಕಟೇಶ್, ತಾಲೂಕು ಆರೋಗ್ಯ ಅಧಿಕಾರಿ ಯತಿರಾಜು ಮತ್ತಿತರರು ಇದ್ದರು.

ಮಡಿಕೇರಿಯಲ್ಲಿ ಚಾಲನೆ:
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಸೋಮವಾರ ನಡೆದ 15 ರಿಂದ 18 ವರ್ಷ ವಯೋಮಾನದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರು ಚಾಲನೆ ನೀಡಿದರು. ಇದಕ್ಕೂ ಮೊದಲು ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಶಾಲಾ-ಕಾಲೇಜುಗಳು ನಡೆಯದೆ ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗೆ ತೊಂದರೆಯಾಗಿದೆ. ಶಾಲೆಯಲ್ಲಿ ಕಲಿಯುವುದಕ್ಕೂ ಆನ್‍ಲೈನ್ ಪಾಠ ಕೇಳುವುದಕ್ಕೂ ಅಜಗಜಾಂತರ ವ್ಯತ್ಯಾಸವಿದ್ದು, ಆ ನಿಟ್ಟಿನಲ್ಲಿ ಕೋವಿಡ್ ತೊಲಗಿಸಲು 15 ರಿಂದ 18 ವರ್ಷದ ವಿದ್ಯಾರ್ಥಿಗಳು ಲಸಿಕೆ ಪಡೆಯುವಂತಾಗಬೇಕು ಎಂದು ಕೋರಿದರು.
ದೇಶ, ರಾಷ್ಟ್ರ ಅಭಿವೃದ್ಧಿಯಾಗಬೇಕಾದರೆ ಪ್ರತಿಯೊಬ್ಬರೂ ಆರೋಗ್ಯಯುತರಾಗಿರಬೇಕು. ಸರ್ಕಾರ ಕೋವಿಡ್ ನಿಯಂತ್ರಿಸುವಲ್ಲಿ ಮೊದಲು 60 ವರ್ಷ ಮೇಲ್ಪಟ್ಟವರಿಗೆ, ನಂತರ 45 ವರ್ಷ ಮೇಲ್ಪಟ್ಟವರಿಗೆ ಬಳಿಕ 18 ವರ್ಷ ಮೇಲ್ಪಟ್ಟವರಿಗೆ ಈಗ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ನಿಯಂತ್ರಣ ಲಸಿಕೆ ನೀಡುತ್ತಿದೆ ಎಂದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ‌ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ಪೊನ್ನಚನ, ಕಾಲೇಜಿನ ಪ್ರಾಂಶುಪಾಲ ವಿಜಯ, ಮುಖ್ಯೋಪಾಧ್ಯಾಯಿನಿ ನಳಿನಿ, ಸ್ಕೌಟ್ಸ್ ಮತ್ತು ಗೈಡ್ಸ್’ನ ಜಿಮ್ಮಿ ಸೀಕ್ವೇರಾ, ರಾಷ್ಟ್ರೀಯ ಆರೋಗ್ಯ ಅಭಿಯಾನದ ದೇವರಾಜು ಮತ್ತಿತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!