ಉತ್ತರ ಕನ್ನಡ ಜಿಲ್ಲಾ ಮಟ್ಟದ ಕೋಟಿ ಕಂಠ ಗಾಯನಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಚಾಲನೆ

ಹೊಸದಿಗಂತ ವರದಿ,ಕಾರವಾರ:

ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಕಾರವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರವಾರ, ಪದವಿಪೂರ್ವ ಶಿಕ್ಷಣ ಇಲಾಖೆ, ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು ಉತ್ತರ ಕನ್ನಡ ಮತ್ತು ಗ್ರಾಮ ಪಂಚಾಯಿತ ಚಿತ್ತಾಕುಲ ಇವರ ಸಂಯುಕ್ತ ಆಶ್ರಯದಲ್ಲಿ 67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಕೋಟಿ ಕಂಠ ಗಾಯನ ಸ್ಪರ್ಧೆ ಚಿತ್ತಾಕುಲದ ಸದಾಶಿವಘಡ ಕೋಟೆಯಲ್ಲಿ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕನ್ನಡ ಭುವನೇಶ್ವರಿಯ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿ ಕವಿ ಕುವೆಂಪುರವರ ನಾಡಗೀತೆ ಮತ್ತು ಬಾರಿಸು ಕನ್ನಡ ದಿಂಡಿಮ, ಎಚ್. ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಡಿ.ಎಸ್. ಕರ್ಕಿಯವರ ಹಚ್ಚೇವು ಕನ್ನಡದ ದೀಪ, ಚನ್ನವೀರ ಕಣವಿ ಅವರ ವಿಶ್ವ ವಿನೂತನ ವಿದ್ಯಾ ಚೇತನ, ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಹಾಡುಗಳನ್ನು ಹಾಡಿ ಕೋಟಿ ಕಂಠಗಳಿಗೆ ಧ್ವನಿಗೂಡಿಸಿದರು.
ನಾಡ ಪ್ರಭು ಕೆಂಪೇಗೌಡರ ಭವ್ಯ ಪ್ರತಿಮೆಯ ಅನಾವರಣದ ಹಿನ್ನೆಲೆಯಲ್ಲಿ ಬನ್ನಿ ನಾಡ ಕಟ್ಟೋಣ ಐತಿಹಾಸಿಕ ಅಭಿಯಾನ ವಾಹನಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ , ಕಾರವಾರ ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ಮತ್ತು ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಪ್ರಭುಲಿಂಗ ಕವಾಳಿಕಟ್ಟಿ, ಜಿ.ಪಂ ಕಾರ್ಯನಿರ್ವಹಣ ಅಧಿಕಾರಿ ಪ್ರಿಯಾಂಗಾ. ಎಂ, ಪೊಲೀಸ್ ವರಿಷ್ಠೆ ಡಾ ಸುಮನ್ ಪನ್ನೇಕರ್, ಕಾರವಾರ ಉಪ ವಿಭಾಗ ಅಧಿಕಾರಿ ಜಯಲಕ್ಷ್ಮಿ, ತಹಶೀಲ್ಧಾರ ನಿಶ್ಚಲ್ ನರೋನ್ನಾ ಉಪಸ್ಥಿತರಿದ್ದರು.
ತಾಲೂಕಿನ ವಿವಿಧ 10 ಶೈಕ್ಷಣಿಕ ಸಂಸ್ಥೆಗಳ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ವೇಷ ಭೂಷಣಗಳೊಂದಿಗೆ ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!