ಹೊಸ ದಿಗಂತ ವರದಿ,ಬೆಳಗಾವಿ :
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನ ಮೇಲೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಬೆಳಗಾವಿ ನಗರದಲ್ಲಿ ಮಂಗಳವಾರ ನಡೆದಿದೆ.
ನಗರದ ಕ್ಲಬ್ ರಸ್ತೆಯಲ್ಲಿ ಕಾರು ನಿಲ್ಲಿಸಿ ಕೆಳಗೆ ನಿಂತಿದ್ದ ವೇಳೆ, ಬೈಕ್‌ನಲ್ಲಿ ಬಂದ ಇಬ್ಬರು ಕಿಡಗೇಡಿಗಳು ಚಾಲಕನ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್ (32) ಎಂಬುವರೇ ಗಾಯಗೊಂಡವರು ಎಂದು ಪೊಲೀಸರು ತಿಳಿಸಿದ್ದಾರೆ.

ದುಷ್ಕರ್ಮಿಗಳು ಬಸವಂತನ ಎದೆ, ಭುಜ ಹಾಗೂ ತೊಡೆ ಸೇರಿ ನಾಲ್ಕು ಕಡೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡ ಬಸವಂತನನ್ನು ತಕ್ಷಣ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಡಿಸಿಪಿ, ಎಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃಣಾಲ್ ಹೆಬ್ಬಾಳ್ಕರ್ ಸಹ ಆಸ್ಪತ್ರೆಗೆ ಆಗಮಿಸಿ ಗಾಯಾಳುವಿನ ಆರೋಗ್ಯ ವಿಚಾರಿಸಿದರು.
ಈ ಘಟನೆ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

