ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ: ಯುವಜನತೆ ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನವನ್ನು ಅಳವಡಿಸಿಕೊಂಡರೆ ಮಾತ್ರ ಕುಟುಂಬ, ಸಮಾಜ ಹಾಗೂ ರಾಷ್ಟ್ರದ ಭವಿಷ್ಯ ಸುರಕ್ಷಿತವಾಗಿರುತ್ತದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕರೆ ನೀಡಿದರು.
ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ “ಬೇಡ ಬ್ರೋ” ಅಭಿಯಾನಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದ ಅವರು, ಮಾದಕ ವಸ್ತುಗಳು ಯುವಜನರ ಬದುಕನ್ನು ಹಾಳು ಮಾಡುವುದರ ಜತೆಗೆ ದೇಶದ ಆರ್ಥಿಕ ಹಾಗೂ ಸಾಮಾಜಿಕ ವ್ಯವಸ್ಥೆಯ ಮೇಲೂ ದುಷ್ಪರಿಣಾಮ ಬೀರುತ್ತಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಸರ್ಕಾರಗಳು ನಿಯಂತ್ರಣಕ್ಕೆ ವಿವಿಧ ಕ್ರಮಗಳನ್ನು ಕೈಗೊಂಡಿದ್ದರೂ ವಿವಿಧ ಮಾರ್ಗಗಳ ಮೂಲಕ ಮಾದಕ ವಸ್ತುಗಳ ಸಾಗಾಣಿಕೆ ನಡೆಯುತ್ತಿರುವುದು ದೊಡ್ಡ ಸವಾಲಾಗಿದೆ ಎಂದರು.
ಯುವಕರು ಕ್ಷಣಿಕ ಆಕರ್ಷಣೆಗೆ ಒಳಗಾಗದೆ ಶಿಕ್ಷಣ, ಶಿಸ್ತು ಮತ್ತು ಉತ್ತಮ ಸಂಸ್ಕಾರಗಳನ್ನು ಅಳವಡಿಸಿಕೊಂಡು ತಮ್ಮ ಗುರಿಗಳತ್ತ ಸಾಗಬೇಕು. ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆ, ಶಿಕ್ಷಣ ಸಂಸ್ಥೆಗಳು, ಪೋಷಕರು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕೆಂದು ಸಚಿವರು ಹೇಳಿದರು.

ಶಾಸಕ ಆಸೀಫ್ ಸೇಠ ಮಾತನಾಡಿ, ಉನ್ನತ ವ್ಯಾಸಂಗಕ್ಕಾಗಿ ನಗರಗಳಿಗೆ ಬರುವ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದರೆ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದರು. ವ್ಯಸನದಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ಉದಾಹರಣೆಗಳಿದ್ದು, ಯಾವುದೇ ಒತ್ತಡಕ್ಕೆ ಮಣಿಯದೆ ಮಾದಕ ವಸ್ತುಗಳನ್ನು ತಿರಸ್ಕರಿಸುವ ಮನೋಬಲ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಮಾದಕ ವಸ್ತುಗಳ ಸೇವನೆಯನ್ನು ಪ್ರತಿಷ್ಠೆಯ ವಿಷಯವೆಂದು ಪರಿಗಣಿಸಬಾರದು ಎಂದು ಎಚ್ಚರಿಸಿದರು. ಯುವಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವನ್ನು ಒತ್ತಿಹೇಳಿದ ಅವರು ಶಾಯರಿ ಮೂಲಕ ವ್ಯಸನಮುಕ್ತ ಜೀವನದ ಸಂದೇಶ ಸಾರಿದರು.
ಪೊಲೀಸ್ ಆಯುಕ್ತ ಭೊರಸೆ ಗುಲಾಬರಾವ್ ಭೂಷಣ ಮಾತನಾಡಿ, ಮುಖ್ಯಮಂತ್ರಿ ಆರಂಭಿಸಿರುವ ಡ್ರಗ್ಸ್ ಮುಕ್ತ ಅಭಿಯಾನದ ಅಂಗವಾಗಿ ಜಿಲ್ಲೆಯಾದ್ಯಂತ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಕಳೆದ ವರ್ಷ ಮಾದಕ ವಸ್ತುಗಳ ಸಂಬಂಧ 49 ಪ್ರಕರಣಗಳನ್ನು ದಾಖಲಿಸಿ ಸುಮಾರು ₹35 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಮಾದಕ ವಸ್ತುಗಳ ಮಾರಾಟ ಅಥವಾ ಬಳಕೆಯ ಬಗ್ಗೆ ಮಾಹಿತಿ ದೊರೆತರೆ ತಕ್ಷಣ ಪೊಲೀಸ್ ಇಲಾಖೆಗೆ ತಿಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಇದನ್ನೂ ಓದಿ:
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮಾತನಾಡಿ, ಶತ್ರು ರಾಷ್ಟ್ರಗಳು ಯುವಜನರನ್ನು ವ್ಯಸನಿಗಳನ್ನಾಗಿಸುವ ಮೂಲಕ ದೇಶವನ್ನು ದುರ್ಬಲಗೊಳಿಸುವ ಸಂಚು ರೂಪಿಸುತ್ತಿವೆ ಎಂದು ಎಚ್ಚರಿಸಿದರು. ಯುವಕರು ದೇಶದ ಅಮೂಲ್ಯ ಸಂಪತ್ತಾಗಿದ್ದು, ಮಾದಕ ವಸ್ತುಗಳ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿ ಐಎಎಸ್ ಅಧಿಕಾರಿ ರೋಹಿತ್ ಸಿಂಗ್, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತ್ಯಾಗರಾಜ್, ಕುಲಸಚಿವ ಸಂತೋಷ ಕಾಮಗೌಡ, ಪೊಲೀಸ್ ಅಧಿಕಾರಿಗಳು, ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ “ಬೇಡ ಬ್ರೋ” ಮತ್ತು “ರೈಸ್” ಅಭಿಯಾನದ ಸಾಕ್ಷ್ಯಚಿತ್ರಗಳನ್ನು ಪ್ರದರ್ಶಿಸಲಾಯಿತು.



