ಫೆಬ್ರವರಿ ಅಂತ್ಯಕ್ಕೆ ಮ್ಯಾನುಯಲ್ ಸ್ಕ್ಯಾವೆಂಜರ್ ಸರ್ವೇ ಪೂರ್ಣಗೊಳಿಸಲು ಸಚಿವ ಕೋಟ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ರಾಜ್ಯದ 18 ಜಿಲ್ಲೆಗಳ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳನ್ನು ಗುರುತಿಸುವ ಸಮೀಕ್ಷೆ ಪೂರ್ಣಗೊಳಿಸಿ, ಫೆಬ್ರವರಿ ಅಂತ್ಯಕ್ಕೆ ವರದಿ ನೀಡಲು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶಿಸಿದ್ದಾರೆ.

ಹಸ್ತಚಾಲಿತ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ನಿಷೇಧ ಕಾಯ್ದೆ ಪ್ರಕಾರ, ತಲೆ ಮೇಲೆ ಮಲಹೊರುವ ಪದ್ಧತಿ ನಿಷೇಧವಾಗಿದ್ದರೂ ಇನ್ನೂ ಹಲವೆಡೆ ಇದು ಚಾಲ್ತಿಯಲ್ಲಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಬಗ್ಗೆ ಸಭೆ ಕರೆಯಬೇಕೆಂಬ ವಿಧಾನ ಪರಿಷತ್ ಸದಸ್ಯರ ಸಲಹೆಯಂತೆ ಸಚಿವರು ಗುರುವಾರ ಸಭೆ ನಡೆಸಿದರು.

ಪೌರಾಡಳಿತ ನಿರ್ದೇಶನಾಲಯ ಮತ್ತು ಪಂಚಾಯತ್ ರಾಜ್ ಇಲಾಖೆಗಳು ಈ ಸಮೀಕ್ಷೆಯನ್ನು ಶೀಘ್ರ ಪೂರ್ಣಗೊಳಿಸಬೇಕು. ಈ ಬಗ್ಗೆ ಆಯೋಗದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು, ರಾಜ್ಯದ 18 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಫೆ. 19ರಂದು ವಿಡಿಯೋ ಕಾನ್ಫರೆನ್ಸ್ ನಡೆಸುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಿರ್ದೇಶನ ನೀಡಿದರು. ಅಲ್ಲದೇ ನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ಗೆ ಸಂಬಂಧಿಸಿದಂತೆ ಬಿಬಿಎಂಪಿ ಹಾಗೂ ಐಡಬ್ಲ್ಯೂಎಸ್‌ಎಸ್‌ಬಿಯ ಮತ್ತು ಬೆಂಗಳೂರು ನಗರ ಜಿಲ್ಲೆಯ ಅಧಿಕಾರಿಗಳೊಂದಿಗೆ ಚರ್ಚಿಸಲು ಬಜೆಟ್ ಅಧಿವೇಶನದ ಒಳಗಾಗಿ ಸಭೆ ಏರ್ಪಡಿಸಲು ಸೂಚನೆ ನೀಡಿದರು.

ಸಕ್ಕಿಂಗ್, ಜೆಟ್ಟಿಂಗ್ ಯಂತ್ರ ಖರೀದಿಗೆ ಸೂಚನೆ:
ಗುರುತಿಸಿರುವಂತಹ ಎಲ್ಲ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಿಗೂ ಪುನರ್ವಸತಿ ಕಲ್ಪಿಸುವ ಸಂಬಂಧ ಪ್ರತ್ಯೇಕ ಮೊತ್ತವನ್ನು ನಿಗಮ ಕಾಯ್ದಿರಿಸಬೇಕು. ರಾಜ್ಯದಲ್ಲಿ ಸಕ್ಕಿಂಗ್, ಜೆಟ್ಟಿಂಗ್ ಯಂತ್ರಗಳು ಕಡಿಮೆ ಇರುವುದರಿಂದ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಪದ್ಧತಿ ಜೀವಂತವಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಎಲ್ಲಾ ತಾಲೂಕು ಪಂಚಾಯತ್‌ಗಳಿಗೆ ಕಡ್ಡಾಯವಾಗಿ ಸಕ್ಕಿಂಗ್, ಜೆಟ್ಟಿಂಗ್ ಯಂತ್ರಗಳನ್ನು ಖರೀದಿಸಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

ಚಿನ್ಮಯ ಆಸ್ಪತ್ರೆಯಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಕೆಲಸ ಮಾಡಿ ಆಸ್ಪತ್ರೆಗೆ ದಾಖಲಾದ ಮಾಲಾ ದೈವಾದೀನಂ ಅವರ ಆಸ್ಪತ್ರೆಯ ವೆಚ್ಚವನ್ನು ಭರಿಸಲು ನಗರ ಜಿಲ್ಲಾಡಳಿತದಿಂದ ಸೂಕ್ತ ಕ್ರಮಕೈಗೊಳ್ಳಬೇಕು. ಜೊತೆಗೆ ಪೊಲೀಸ್ ಇಲಾಖೆಯು ಸಂಬಂಧಪಟ್ಟ ಆಸ್ಪತ್ರೆಯ ಮುಖ್ಯಾಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕೆಂದು ಸಚಿವರು ನಿರ್ದೇಶನ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಕೋಟೆ ಶಿವಣ್ಣ, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರವಿ ಸುರಪುರ್ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!