March 12, 2026
Thursday, March 12, 2026
spot_img

ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ: ಸರ್ಕಾರಕ್ಕೆ ಮಹತ್ವದ ಸೂಚನೆ ನೀಡಿದ ಹೈಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರ ನೇಮಕ ಕುರಿತು ನಿಲುವು ತಿಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಕೆ.ಗೋವಿಂದರಾಜ್‌, ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಸುನೀಲ್ ಕನಗೋಲು, ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನೇಮಕಾತಿ ಪ್ರಶ್ನಿಸಿ ವಕೀಲ ಎಸ್.ಉಮಾಪತಿ ಎಂಬುವರಯ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದರ ಜೊತೆಗೆ ರಾಜ್ಯ ಸರ್ಕಾರವು, ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಸಂಬಂಧ ಸೂರಿ ಪಾಯಲ ಎಂಬುವರು ಹೈಕೋರ್ಟ್​​ಗೆ ಪಿಐಎಲ್ ಸಲ್ಲಿಸಿದ್ದು, ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರನ್ನು ನೇಮಿಸುವ ಮೂಲಕ ಸಂವಿಧಾನದ 164(1)A ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದ್ದರು.

ಈ ಸಂಬಂಧ ಪಿಐಎಲ್​​ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಈ ಬಗ್ಗೆ ನಿಲುವು ತಿಳಿಸಲು ರಾಜ್ಯ ಸರ್ಕಾರಕ್ಕೆ ಖಡಕ್ ಸೂಚನೆ ನೀಡಿದೆ. ಸಚಿವರ ಸಂಖ್ಯೆ ಶಾಸಕರ ಸಂಖ್ಯೆಯ ಶೇ.15ರಷ್ಟನ್ನು ಮೀರುವಂತಿಲ್ಲ. ಆದರೆ ಸಚಿವ ಸ್ಥಾನಮಾನದ ಮೂಲಕ ಸಂವಿಧಾನದ ನಿಯಮ ಉಲ್ಲಂಘಿಸಿದ್ದಾರೆಂದು ದೂರುದಾರ ಸೂರಿ ಪಾಯಲ ಪರ ವಕೀಲರು ವಾದ ಮಂಡಿಸಿದ್ದು, ಈ ಸಂಬಂಧ ರಾಜ್ಯ ಸರ್ಕಾರದ ನಿಲುವು ತಿಳಿಸಲು ಸೂಚಿಸಿ ವಿಚಾರಣೆಯನ್ನು ಮಾರ್ಚ್ 4ಕ್ಕೆ ಮುಂದೂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !