ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಿಜೋರಾಂನ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿತ ಪ್ರಕರಣದಲ್ಲಿನ ಜೀವಹಾನಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬುಧವಾರ ಸಂತಾಪ ಸೂಚಿಸಿದ್ದಾರೆ ಮತ್ತು ಸಂತ್ರಸ್ತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಮಿಜೋರಾಂನಲ್ಲಿ ನಡೆದ ಅಹಿತಕರ ಘಟನೆಯಿಂದ ದುಃಖಿತನಾಗಿದ್ದೇನೆ. ಎನ್ಡಿಆರ್ಎಫ್, ರಾಜ್ಯ ಸರ್ಕಾರ ಮತ್ತು ರೈಲ್ವೆ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ಸಾಗಿದೆ. ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ತಲಾ 10 ಲಕ್ಷ ರೂ., ಗಾಯಾಳುಗಳಿಗೆ 2 ಲಕ್ಷ ರೂ.
ಮತ್ತು ಸಣ್ಣಪುಟ್ಟ ಗಾಯಗಳಿಗೆ 50,000 ರೂ. ನೀಡಲಾಗುವುದು’ ಎಂದಿದ್ದಾರೆ.
ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ ಕಾರ್ಯಾಲಯ, ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ, ರಕ್ಷಣಾ ಕಾರ್ಯಾಚರಣೆಗೆ ಅಗತ್ಯ ನೆರವು ನೀಡಲಾಗುವುದು ಎಂದಿದೆ. ಅಲ್ಲದೆ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ನೆರವು ಘೋಷಿಸಿದೆ.
ಮಿಜೋರಾಂನಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ಸೇತುವೆ ಕುಸಿದು ಕನಿಷ್ಠ 17 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ‘ಘಟನೆಯನ್ನು ತನಿಖೆ ಮಾಡಲು ಉನ್ನತ ಮಟ್ಟದ ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ’ ಎಂದು ಉತ್ತರ ಫ್ರಾಂಟಿಯರ್ ರೈಲ್ವೆ ಅಧಿಕಾರಿ ತಿಳಿಸಿದ್ದಾರೆ.