ಮದುವೆ ಗಂಡಿಗೆ ಬಾಸಿಂಗವೇ ಇಲ್ಲದಂತಿದೆ ಜಾತಿ ಗಣತಿಯ ವರದಿ- ಸುನೀಲ್‌ ಕುಮಾರ್‌ ಟೀಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ರಾಜಕಾರಣದಲ್ಲಿ ಜಾತಿ ಗಣತಿಯ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಈ ವಿಚಾರ ಕುರಿತಂತೆ ಸರಣಿ ಟ್ವೀಟ್‌ ಮಾಡಿರುವ ಕಾರ್ಕಳ ಶಾಸಕ ಸುನೀಲ್‌ ಕುಮಾರ್‌, ಮದುವೆ ಗಂಡಿಗೆ ಬಾಸಿಂಗವೇ ಇಲ್ಲದಂತಿದೆ ಈ ಜಾತಿ ಗಣತಿಯ ವರದಿ ಎಂದು  ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ʻಜಾತಿ ಗಣತಿ ವರದಿಯಲ್ಲಿನ ಗೋಜಲುಗಳನ್ನು ಗಮನಿಸಿದರೆ ಇದೊಂದು ದೊಡ್ಡ ಹಗರಣ ಎಂಬುದರಲ್ಲಿ ಅನುಮಾನವೇ ಇಲ್ಲ. 162 ಕೋಟಿ ರೂಪಾಯಿ ವೆಚ್ಚದಲ್ಲಿ ತಯಾರಿಸಿದ ವರದಿಯ ಉದ್ದೇಶವೇ ಈಡೇರುತ್ತಿಲ್ಲ ಎಂದರೆ ಅರ್ಥವೇನು ? ವರದಿ ಬಗ್ಗೆ ಇಷ್ಟೆಲ್ಲ ಚರ್ಚೆ ನಡೆಯುತ್ತಿದ್ದರೂ ಆಯೋಗದ ಹಿಂದಿನ ಅಧ್ಯಕ್ಷ ಕಾಂತರಾಜ್ ನಾಪತ್ತೆಯಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮುಂದುವರಿದು ಸರಕಾರವನ್ನು ಪ್ರಶ್ನಿಸಿದ ಸುನೀಲ್‌ ಕುಮಾರ್‌, ʻವರದಿಗೆ ಏಕೆ ಸಹಿ ಹಾಕಿಲ್ಲ ಎಂಬ ಬಗ್ಗೆ ಸದಸ್ಯ ಕಾರ್ಯದರ್ಶಿ ಮಗುಮ್ಮಾಗಿದ್ದಾರೆ. ಆಯೋಗದ ವರದಿಗೆ ಅವರು ಅಂದು ಸಹಿ ಹಾಕಿಲ್ಲ ಎಂದರೆ ತಾವು ಈ ವರದಿಯ ಭಾಗವಾಗಲು ತಯಾರಿಲ್ಲ ಎಂದರ್ಥವಲ್ಲವೇ ? ಅಂದರೆ ವರದಿ ತಯಾರಿ ಹಂತದಲ್ಲೇ ಭಾರಿ ಲೋಪ ಹಾಗೂ ಅವ್ಯವಹಾರ ನಡೆದಿದೆ ಎಂಬುದು ಸ್ಪಷ್ಟವಾಗುತ್ತದೆ. ಸಾಮಾಜಿಕ ನ್ಯಾಯದ ಬಗ್ಗೆ ಸಿದ್ದರಾಮಯ್ಯನವರಿಗೆ ನಿಜಕ್ಕೂ ಬದ್ಧತೆ ಇದ್ದರೆ ವರದಿ ಅಧ್ಯಯನದ ಬಗ್ಗೆ ಸಂಪುಟ ಉಪಸಮಿತಿ ರಚಿಸುವ ಇನ್ನೊಂದು ನಾಟಕ ಕೈ ಬಿಟ್ಟು ಹಿಂದಿನ ತಪ್ಪುಗಳ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲಿʼ ಎಂದು ಆಗ್ರಹಿಸಿದ್ದಾರೆ.

ಮೂಲ ಪ್ರತಿಯೇ ಇಲ್ಲದ, ಕಾರ್ಯದರ್ಶಿಯ ಸಹಿಯೇ ಇಲ್ಲದ ಜಾತಿ ಗಣತಿ ವರದಿ ಎಂದರೆ “ಮದುವೆ ಗಂಡಿಗೆ ಬಾಸಿಂಗವೇ ಇಲ್ಲ”ದಂತೆ. ಸಿದ್ದರಾಮಯ್ಯನವರೇ ಹಿಂದುಳಿದ ವರ್ಗ ಹಾಗೂ ದಲಿತ ಸಮುದಾಯಕ್ಕೆ ಎಂಥ ದ್ರೋಹ ಮಾಡಿ ಬಿಟ್ಟಿರಿ ! ನೀವೆಸಗಿದ ಈ ತಪ್ಪನ್ನು ಇತಿಹಾಸ ಕ್ಷಮಿಸದು. ಬರೋಬ್ಬರಿ 162 ಕೋಟಿ ರೂ. ವೆಚ್ಚ ಮಾಡಿ ತಯಾರಿಸಿದ ಜಾತಿ ಗಣತಿಯ ವರದಿಯೇ ಲಭ್ಯವಿಲ್ಲ ಎಂದರೆ ಇದಕ್ಕೆ ಹೊಣೆ ಯಾರು ? ಫೋರ್ಜರಿ ವರದಿ ತಯಾರಿಸಿ ರಾಹುಲ್ ಗಾಂಧಿಯವರನ್ನು‌ ಮೆಚ್ಚಿಸಲು ಹೊರಟಿದ್ದೀರಾ? ಎಂದು ಪ್ರಶ್ನೆಗಳ ಸರಮಾಲೆಯನ್ನೇ ಕೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!