ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಶ್ರೀಕ್ಷೇತ್ರದಲ್ಲಿ ಇಂದು ಐತಿಹಾಸಿಕ ಮತ್ತು ಭಕ್ತಿಭಾವಪೂರ್ಣ ಕ್ಷಣಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆ ಮಾಡಿ, ನಂತರ ಭಕ್ತರ ಮಹಾಸಂಗಮವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮಕ್ಕೂ ಮುನ್ನ ಮೋದಿ ಅವರು ಕಾಲಭೈರವನಿಗೆ ವಿಶೇಷ ಪೂಜೆ ಸಲ್ಲಿಸಿ, ಪರಂಪರಾಗತ ದ್ರಾವಿಡ ಶೈಲಿಯಲ್ಲಿ ನಿರ್ಮಿಸಲಾದ ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದರು. ಈ ಮಂದಿರವು ಪೂರ್ವ ಪೀಠಾಧಿಪತಿ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಸ್ಮರಣಾರ್ಥ ನಿರ್ಮಿಸಲಾದ ಸ್ಮಾರಕವಾಗಿದೆ.
ಇದನ್ನೂ ಓದಿ:
ವೇದಿಕೆ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಭಕ್ತರು “ಮೋದಿ ಮೋದಿ” ಘೋಷಣೆಗಳೊಂದಿಗೆ ಪ್ರಧಾನಮಂತ್ರಿಯನ್ನು ಸ್ವಾಗತಿಸಿದ ದೃಶ್ಯ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಯಿತು.
ಇದೆ ಸಂದರ್ಭದಲ್ಲಿ ಮಠದ ಪೀಠಾಧಿಪತಿ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಪ್ರಧಾನಮಂತ್ರಿ ಮೋದಿ ಅವರಿಗೆ ಸನ್ಮಾನ ಮಾಡಿದರು. ಶಾಲು ಹೊದಿಸಿ, ಬೆಳ್ಳಿಯಿಂದ ತಯಾರಿಸಲಾದ ನವಿಲಿನ ಮೂರ್ತಿಯನ್ನು ಉಡುಗೊರೆಯಾಗಿ ಪ್ರಧಾನಮಂತ್ರಿಗೆ ನೀಡಿದರು.



