ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೌರತ್ವ (ತಿದ್ದುಪಡಿ) ಕಾಯ್ದೆಯಡಿ ಗೃಹ ಸಚಿವಾಲಯ ಇಂದು 14 ಜನರಿಗೆ ಪೌರತ್ವ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದೆ.
ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ (ತಿದ್ದುಪಡಿ) ಕಾಯ್ದೆ, 2019 (Citizenship Amendment Act) ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿತ್ತು. ಸಿಎಎ ನಿಯಮಗಳ ಜಾರಿಗೆ ಕೇಂದ್ರ ಸರ್ಕಾರವು ಕಳೆದ ಮಾರ್ಚ್ 11ರಂದು ಅಧಿಸೂಚನೆ ಹೊರಡಿಸಿದೆ. ಆ ಮೂಲಕ ದೇಶದಲ್ಲಿ ಸಿಎಎ ಜಾರಿಗೊಳಿಸಿದೆ.
ಇದೀಗ ಇದರ ಅಡಿ 14 ಜನರಿಗೆ ಭಾರತದ ಪೌರತ್ವ (Indian Citizenship) ನೀಡಿದೆ. ಸಿಎಎ (CAA) ಅಡಿಯಲ್ಲಿ ಪೌರತ್ವ ಕಲ್ಪಿಸಿರುವ ಕುರಿತು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು 14 ಜನರಿಗೆ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದ್ದಾರೆ.
2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.
ಸಿಎಎ ಕುರಿತ ಗುಪ್ತಚರ ಬ್ಯೂರೋ ವರದಿಯ ಪ್ರಕಾರ, ಕಾಯ್ದೆಯ ನಿಯಮಗಳು ಪ್ರಕಟಗೊಂಡ ತಕ್ಷಣವೇ 30,000 ಕ್ಕೂ ಹೆಚ್ಚು ಫಲಾನುಭವಿಗಳು (ವಲಸಿಗರು) ಇದರ ಲಾಭವನ್ನು ಪಡೆಯುತ್ತಾರೆ.