ಮೋದಿ ಪ್ರಧಾನಿಯಾಗಲು ಹೆಚ್ಚಿನ ಎಂಪಿಗಳು ಬೇಕು, ಆ ಪೈಕಿ ನಾನೂ ಒಬ್ಬ: ಪ್ರಹ್ಲಾದ್ ಜೋಶಿ

ಹೊಸದಿಗಂತ ವರದಿ, ವಿಜಯಪುರ:

ಮೋದಿ ಅವರು ಪ್ರಧಾನಿಯಾಗಿ ಆಯ್ಕೆಯಾಗಲು ಹೆಚ್ಚಿನ ಎಂಪಿಗಳು ಬೇಕು. ಆ ಎಂಪಿಗಳ ಪೈಕಿ ನಾನು ಒಬ್ಬ ಇರಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ನಗರ ಹೊರ ವಲಯ ತೊರವಿ ಗ್ರಾಮದ ನರಸಿಂಹ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಹಿತದೃಷ್ಟಿಯಿಂದ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಬೇಕು ಎಂದರು.

ಮೋದಿ ಅವರು ಹತ್ತು ವರ್ಷದ ಆಡಳಿತದಲ್ಲಿ ದೇಶದಲ್ಲಾದ ಬದಲಾವಣೆಯನ್ನು ಜನ ಗಮನಿಸಿದ್ದಾರೆ. ದುರ್ಬಲ ಆರ್ಥಿಕತೆಯನ್ನು ಹೊಂದಿದ್ದ ಭಾರತ ಜಗತ್ತಿನ ಐದನೇ ಬಲಿಷ್ಠ ಆರ್ಥಿಕ ಶಕ್ತಿಯ ದೇಶವಾಗಿದೆ. ಮೂರನೇ ಬಾರಿ ಅಧಿಕಾರಕ್ಕೆ ಬಂದರೆ ಭಾರತವನ್ನು ಜಗತ್ತಿನ ಮೂರನೇ ಆರ್ಥಿಕ ಬಲಿಷ್ಠ ರಾಷ್ಟ್ರವನ್ನಾಗಿಸುವ ಎಂದು ಮೋದಿ ಗ್ಯಾರಂಟಿ ಕೊಟ್ಟಿದ್ದಾರೆ. ರಾಜ್ಯದ 28 ಕ್ಕೆ 28 ಸ್ಥಾನಗಳನ್ನು ನಾವು ಗೆಲ್ಲುತ್ತೇವೆ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ರೌಡಿ ಎಂದು ಮಾತನಾಡಿರುವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿ, ಅವರ ಭಾಷೆಯನ್ನೇ ನೋಡಿದರೆ ನಿಮಗೆ ಅರ್ಥವಾಗುತ್ತದೆ. ಬಾಯಿಗೆ ಬಂದಂತೆ, ಮನಬಂದಂತೆ ಏಕವಚನದಲ್ಲಿ ಟೀಕೆ ಮಾಡುತ್ತಾರೆ. ಇವರು ಹತಾಶರಾಗಿ ಸರ್ಟಿಫಿಕೇಟ್ ಕೊಡೋ ಮಟ್ಟಕ್ಕೆ ಹೋಗಿದ್ದಾರೆ. ಇದಕ್ಕೆ ಜನರೇ ಉತ್ತರ ನೀಡುತ್ತಾರೆ ಎಂದರು.

ಅಮಿತ್ ಹಾಗೂ ಮೋದಿ ಅವರ ನೇತೃತ್ವದಲ್ಲಿ ನಾವು ಎರಡು ಬಾರಿ ಚುನಾವಣೆಗಳನ್ನ ಗೆದ್ದಿದ್ದೇವೆ. ಕರ್ನಾಟಕದಲ್ಲಿ ಚುನಾವಣೆ ಗೆದ್ದಿದ್ದೇವೆ ಎಂಬ ದುರಹಂಕಾರದಲ್ಲಿ ಮೆರೆಯಬೇಡಿ ಎಂದು ಎಚ್ಚರಿಕೆ ನೀಡಿದರು.

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪ್ರಹ್ಲಾದ ಜೋಶಿ ಬದಲಾಗಿ ಬೇರೆಯವರಿಗೆ ಟಿಕೆಟ್ ನೀಡಬೇಕೆಂಬ ದಿಂಗಾಲೇಶ್ವರ ಸ್ವಾಮೀಜಿ ಒತ್ತಾಯ ವಿಚಾರ ಬಗ್ಗೆ, ದಿಂಗಾಲೇಶ್ವರ ಸ್ವಾಮೀಜಿಗಳ ಹೇಳಿಕೆ ಕುರಿತು ನಾನು ಪ್ರತಿಕ್ರಿಯೆ ನೀಡಲ್ಲ. ಅವರ ಎಲ್ಲ ಹೇಳಿಕೆಗಳು ನನಗೆ ಆಶೀರ್ವಾದವಿದ್ದಂತೆ. ಅವರ ಆಶೀರ್ವಾದದಿಂದ ನಾನು ಚುನಾವಣೆಯಲ್ಲಿ ಗೆಲ್ಲುವೆ. ಇದಕ್ಕಿಂತ ಹೆಚ್ಚಿಗೆ ನಾನು ಏನು ಹೇಳಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!