ಹೊಸದಿಗಂತ ಡಿಜಿಟಲ್ ಡೆಸ್ಕ್:
ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ, ಸರ್ಕಾರ ರಚನೆ ಕುರಿತು ಹಕ್ಕು ಮಂಡಿಸಿದ್ದಾರೆ. ಜೂನ್ 9ರಂದು (ಭಾನುವಾರ) ಸಂಜೆ 7.15ಕ್ಕೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರಪತಿ ಭವನ ಮಾಹಿತಿ ನೀಡಿದ್ದು, ‘ನರೇಂದ್ರ ಮೋದಿ ಅವರು ಪ್ರಧಾನಿಯಾಗಿ, ಹಲವು ಸಂಸದರು ಸಚಿವರಾಗಿ ಜೂನ್ 9ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಜೂನ್ 9ರಂದು (ಭಾನುವಾರ) ಸಂಜೆ 7.15ಕ್ಕೆ ಕಾರ್ಯಕ್ರಮ ನಡೆಯಲಿದೆ’ ಎಂದು ತಿಳಿಸಿದೆ.
ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸುವ ಸಂಸದರು ಯಾರು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಇನ್ನು, ನರೇಂದ್ರ ಮೋದಿ ಜೊತೆ ಎನ್‌ಡಿಎ ಮೈತ್ರಿಕೂಟದ ಹಲವು ಸದಸ್ಯರು ಕೂಡ ರಾಷ್ಟ್ರಪತಿ ಅವರನ್ನು ಭೇಟಿಯಾದರು.
ಬಿಹಾರ ಸಿಎಂ ನಿತೀಶ್ ಕುಮಾರ್, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ನೂತನ ಸಂಸದ ಡಾ.ಸಿ.ಎನ್.ಮಂಜುನಾಥ್ ಸೇರಿ ಹಲವು ನಾಯಕರು ಇದ್ದರು.