Friday, December 19, 2025

ʼಮೋದಿಯಿಂದ ಗ್ರಾಮೀಣ ಕುಟುಂಬಗಳಿಗೆ ವರವಾಗಿದ್ದ ಯೋಜನೆ ನಾಶವಾಗಿದೆʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೃಹತ್‌ ನಿರುದ್ಯೋಗದ ಮೂಲಕ ಭಾರತದ ಯುವಕರ ಭವಿಷ್ಯವನ್ನು ನಾಶಪಡಿಸಿದ ಮೋದಿ ಸರ್ಕಾರ ಈಗ ಬಡ ಗ್ರಾಮೀಣ ಕುಟುಂಬಗಳಿಗೆ ವರವಾಗಿದ್ದ ಯೋಜನೆಯನ್ನೇ ಹಾಳು ಮಾಡಲು ಮುಂದಾಗಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹೆಸರನ್ನು ದಿ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ) ಎಂಬುದಾಗಿ ಮರುನಾಮಕರಣ ಮಾಡಿದ್ದಕ್ಕೆ ಎಕ್ಸ್‌ನಲ್ಲಿ ದೀರ್ಘ ಪೋಸ್ಟ್‌ ಮಾಡಿ ಸಿಟ್ಟು ಹೊರಹಾಕಿದ್ದಾರೆ.

ಮಹಾತ್ಮಾ ಗಾಂಧೀಜಿಯವರ ವಿಚಾರಗಳು ಮತ್ತು ಬಡವರ ಹಕ್ಕುಗಳು ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಸಹ್ಯವಿದೆ ಎಂದು ರಾಹುಲ್‌ ಗಾಂಧಿ ಟೀಕಿಸಿದ್ದಾರೆ. ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ಯದ ದೃಷ್ಟಿಕೋನದ ಜೀವಂತ ಸಾಕಾರವೇ MGNREGA ಯೋಜನೆ. ಇದು ಲಕ್ಷಾಂತರ ಗ್ರಾಮೀಣ ಭಾರತೀಯರ ಜೀವನಾಡಿಯಾಗಿದೆ ಮತ್ತು ಕೋವಿಡ್‌ ಸಾಂಕ್ರಾಮಿಕ ಸಮಯದಲ್ಲಿ ಉದ್ಯೋಗ ನೀಡುವ ಮೂಲಕ ಬಡವರಿಗೆ ನೆರವಾಗಿತ್ತು. ಇಷ್ಟೊಂದು ಉತ್ತಮ ಯೋಜನೆಯನ್ನು ಕಳೆದ ಹತ್ತು ವರ್ಷಗಳಿಂದ ಮೋದಿ ಸರ್ಕಾರ ವ್ಯವಸ್ಥಿತವಾಗಿ ದುರ್ಬಲಗೊಳಿಸಲು ಪ್ರಯತ್ನಿಸಿದೆ. ಈಗ MGNREGA ವನ್ನು ಸಂಪೂರ್ಣವಾಗಿ ಅಳಿಸಿಹಾಕಲು ಮೋದಿಯವರು ದೃಢನಿಶ್ಚಯ ಮಾಡಿದ್ದಾರೆ ಎಂದು ಸಿಟ್ಟಾಗಿದ್ದಾರೆ.

error: Content is protected !!