ಹೊಸದಿಗಂತ ಡಿಜಿಟಲ್ ಡೆಸ್ಕ್;
ಮನಿ ಲಾಂಡರಿಂಗ್ ಪ್ರಕರಣಗಳಲ್ಲಿಯೂ ಜಾಮೀನು ಒಂದು ನಿಯಮ ಮತ್ತು ಜೈಲು ಒಂದು ವಿನಾಯಿತಿ ಎಂದು ಸುಪ್ರೀಂಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
ಜಾರಿ ನಿರ್ದೇಶನಾಲಯ (ED) ದಾಖಲಿಸಿರುವ ಅಕ್ರಮ ಗಣಿಗಾರಿಕೆ ಸಂಬಂಧಿತ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರ ಸಹಾಯಕನಿಗೆ ಜಾಮೀನು ನೀಡುವ ವೇಳೆಯಲ್ಲಿ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿರುವ ಪ್ರಕರಣಗಳಲ್ಲಿಯೂ ಸಹ “ಜಾಮೀನು ಒಂದು ನಿಯಮವಾಗಿದೆ ಮತ್ತು ಜೈಲು ಒಂದು ಅಪವಾದವಾಗಿದೆ” ಎಂದು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠ ತಿಳಿಸಿದೆ.
ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಒಳಗೊಂಡಿರುವ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣಗಳ ತೀರ್ಪನ್ನು ಆ.9ರಂದು ಉಲ್ಲೇಖಿಸಿದ ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ವ್ಯಕ್ತಿಯ ಸ್ವಾತಂತ್ರ‍್ಯ ಯಾವಾಗಲೂ ನಿಯಮವಾಗಿದೆ ಮತ್ತು ಕಾನೂನಿನಿಂದ ಸ್ಥಾಪಿಸಲಾದ ಕಾರ್ಯವಿಧಾನದಿಂದ ಅದನ್ನು ಕಳೆದುಕೊಳ್ಳುವುದು ಅಪವಾದವಾಗಿದೆ. ಯಾವುದೇ ವ್ಯಕ್ತಿಯ ಸ್ವಾತಂತ್ರ‍್ಯವನ್ನು ಕಸಿದುಕೊಳ್ಳಬಾರದು ಎಂದು ಪೀಠ ತಿಳಿಸಿದೆ.
ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಇಡಿ ಸೋರೆನ್ ಅವರ ಆಪ್ತ ಸಹಾಯಕ ಪ್ರೇಮ್ ಪ್ರಕಾಶ್‌ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಜಾರ್ಖಂಡ್ ಹೈಕೋರ್ಟ್ ಮಾ.22 ರಂದು ಜಾಮೀನು ನಿರಾಕರಿಸಿದ ಹಿನ್ನೆಲೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.