ರಾಜ್ಯದಲ್ಲಿ ಮುಂಗಾರು ಚುರುಕು: ಬೆಂಗಳೂರು ಸೇರಿ ಹಲವಡೆ ವಾರಾಂತ್ಯದಲ್ಲಿ ಮಳೆ ಆರ್ಭಟ ಹೆಚ್ಚಳ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸೋಮವಾರದಿಂದ ಬೆಂಗಳೂರಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ವಾರಾಂತ್ಯದ ವೇಳೆಗೆ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ.

ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಸೋಮವಾರ ಹಗುರದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಬಳಿಕ ವಾರಾಂತ್ಯದ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಬಿರುಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.

ನೈಋತ್ಯ ಮಾನ್ಸೂನ್ ಪ್ರಸ್ತುತ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಇದು ದುರ್ಬಲವಾಗಿದೆ. ಕರಾವಳಿ ಕರ್ನಾಟಕದ ಹಲವೆಡೆ, ಉತ್ತರ ಒಳನಾಡಿನಲ್ಲಿ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಿದೆ.

ಮಂಗಳವಾರದ ಹವಾಮಾನ ಎಚ್ಚರಿಕೆಯಲ್ಲಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 40-50 ಕಿ.ಮೀ) ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!