June 1, 2026
Monday, June 1, 2026
spot_img

ಮುಂಗಾರು ಮಿಷನ್ ಆರಂಭ: ರಾಜ್ಯದೆಲ್ಲೆಡೆ ವರುಣನ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ವೇಗ ಪಡೆದುಕೊಳ್ಳುತ್ತಿದ್ದು, ಮುಂದಿನ ಕೆಲ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 4ರಿಂದ ಕರಾವಳಿ ಭಾಗದಲ್ಲಿ ಮುಂಗಾರು ಪ್ರವೇಶಿಸುವ ನಿರೀಕ್ಷೆಯಿದ್ದು, ಜೂನ್ 8ರ ಬಳಿಕ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜೂನ್ 3ರಿಂದ 5ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕೆಲವು ಪ್ರದೇಶಗಳಲ್ಲಿ 64.5 ಮಿ.ಮೀ.ರಿಂದ 115.5 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಬಿರುಗಾಳಿ ಹಾಗೂ ಸಿಡಿಲಿನ ಆತಂಕವೂ ಎದುರಾಗಿದೆ.

ಉತ್ತರ ಕರ್ನಾಟಕದಲ್ಲಿ ಗಾಳಿ-ಮಳೆಯ ಎಚ್ಚರಿಕೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 4ರವರೆಗೆ ವ್ಯಾಪಕ ಮಳೆಯಾಗಲಿದ್ದು, ಗಂಟೆಗೆ 50ರಿಂದ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬೆಳಗಾವಿ, ಹಾವೇರಿ, ಕೊಪ್ಪಳ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ:

ದಕ್ಷಿಣ ಒಳನಾಡಿನಲ್ಲಿ ಗುಡುಗು-ಸಿಡಿಲಿನ ಆತಂಕ

ಬೆಂಗಳೂರು, ಮೈಸೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಜೂನ್ 5ರವರೆಗೆ ಹಲವು ಕಡೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಮುಂಗಾರು ಚಟುವಟಿಕೆ ತೀವ್ರ

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 3ರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣದ ನಡುವೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !