ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಳೆಗಾಲ ಅನ್ನೋದು ಮರೆತೇ ಹೋದಂತಾಗಿದೆ. ಇಂದಿನಿಂದ ಮುಂಗಾರು ಮತ್ತೆ ಚುರುಕುಗೊಂಡಿದೆ. ಆದರೆ ಒಳನಾಡು ಭಾಗಗಳಲ್ಲಿ ಮಳೆ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಬಹುತೇಕ ಕಡೆ ಸಾಧಾರಣ ಗಾಳಿ ಮಳೆ ಬೀಳಲಿದೆ. ಇನ್ನೆರಡು ದಿನ ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಮಳೆ ಸ್ವಲ್ಪ ಕಡಿಮೆ ಬಿದ್ದರೂ ಗಾಳಿ ನಿರಂತರವಾಗಿ ಬೀಸುತ್ತಲೇ ಇರುತ್ತದೆ. ಬೆಳಗಾವಿ, ಧಾರವಾಡ ಮತ್ತು ಹಾವೇರಿ ಆಗಸ್ಟ್ 31 ಹಾಗೂ ಸೆಪ್ಟೆಂಬರ್ 1ರಂದು ಸಾಧಾರಣ ಮಳೆ ಅಥವಾ ಮೋಡಕವಿದ ವಾತಾವರಣ ಇರಲಿದೆ. ಇನ್ನು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಎರಡೂ ದಿನ ಸಾಮಾನ್ಯ ಮಳೆ ಬೀಳಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಒಂದೆರಡು ಕಡೆ ಹಗುರ ಮಳೆಯಾಗುವ ಮುನ್ಸೂಚನೆ ಇದೆ.



