ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು, ಇನ್ನೆರಡು ದಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಜುಲೈ 15ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲೂ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಇನ್ನಿತರ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸಲಿದೆ.



