ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಡುಗೆ ಮನೆಯ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿದ್ದ ಮೂವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಿಜಾರಿನಲ್ಲಿ ಇಂದು ನಡೆದಿದೆ.
ಶಿವರಾಮ (31), ಅವರ ಪತ್ನಿ ಗಂಗಾ (25) ಹಾಗೂ ಮಗ ಆದರ್ಶ್ (6 ) ಗಾಯಗೊಂಡವರಾಗಿದ್ದು, ಈ ಪೈಕಿ ಶಿವರಾಮಗೆ ತೀವ್ರ ತರದ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಗ್ಗೆ ಸುಮಾರು 6.30ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಕುಟುಂಬ ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದೆ. ಶಿವರಾಮ ಸ್ಥಳೀಯ ಕಾಲೇಜೊಂದರಲ್ಲಿ ಉದ್ಯೋಗಿಯಾಗಿದ್ದಾರೆ.
ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ತಪಾಸಣೆ ನಡೆಸಿದ್ದಾರೆ.



