ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜಕಾರಣದಲ್ಲಿ ಇಂದು ಮಹತ್ವದ ದಿನವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಲೋಕಭವನ ಆವರಣದಲ್ಲಿರುವ ಗಾಜಿನ ಮನೆಯಲ್ಲಿ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.
ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಪ್ರಮಾಣವಚನ:
ರಾಜಕೀಯ ಇತಿಹಾಸದಲ್ಲೇ ಅತ್ಯಂತ ವೈಶಿಷ್ಟ್ಯಪೂರ್ಣವಾಗಿ ಮೂಡಿಬರಲಿರುವ ಈ ಸಮಾರಂಭಕ್ಕೆ ವಿವಿಧ ಧರ್ಮಗಳ ಅಂದರೆ ಸ್ವಾಮೀಜಿಗಳು, ಫಾದರ್ ಹಾಗೂ ಮೌಲ್ವಿಗಳು ಸೇರಿದಂತೆ ಒಟ್ಟು 55 ಕ್ಕೂ ಹೆಚ್ಚು ಸರ್ವಧರ್ಮ ಗುರುಗಳಿಗೆ ಆಹ್ವಾನ ನೀಡಲಾಗಿದೆ. ಇವರ ಪವಿತ್ರ ಸಮ್ಮುಖದಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ವೇದಿಕೆಯಲ್ಲಿ ಗಣ್ಯರಿಗಾಗಿ 20 ಆಸನಗಳ ವಿಶೇಷ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಸಚಿವರ ಪಟ್ಟಿ ಫೈನಲ್ ಮಾಡಿದ ಹೈಕಮಾಂಡ್:
ಮುಖ್ಯಮಂತ್ರಿಗಳ ಜೊತೆಗೆ ಇಂದು 10 ಕ್ಕೂ ಹೆಚ್ಚು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಕ್ಯಾಬಿನೆಟ್ ಪಟ್ಟಿಯನ್ನು ಅಂತಿಮಗೊಳಿಸಲು ದೆಹಲಿಯಲ್ಲಿ ತಡರಾತ್ರಿಯವರೆಗೂ ಭರ್ಜರಿ ಕಸರತ್ತು ನಡೆದಿದೆ. ಮಂಗಳವಾರ ಬೆಳಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಿ ಸಚಿವರ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿತ್ತು. ಆ ಬಳಿಕ ಸಂಜೆ ವೇಣುಗೋಪಾಲ್ ನಿವಾಸದಲ್ಲಿ ನಡೆದ ಮತ್ತೊಂದು ಸುತ್ತಿನ ಸಭೆಯ ನಂತರ ಹೈಕಮಾಂಡ್ ಅಂತಿಮ ಮುದ್ರೆ ಒತ್ತಿದೆ. ಇದೀಗ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಒಟ್ಟಿಗೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
ಈ ಹೈವೋಲ್ಟೇಜ್ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ. ವೇಣುಗೋಪಾಲ್ ಹಾಗೂ ಸುರ್ಜೇವಾಲಾ ಸೇರಿದಂತೆ ದೇಶದ ಹಲವು ರಾಜ್ಯಗಳ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಈಗಾಗಲೇ ಕೇರಳದ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಬೆಂಗಳೂರಿಗೆ ತಲುಪಿದ್ದಾರೆ.
80 ರ ದಶಕದಿಂದ ವಿದ್ಯಾರ್ಥಿ ಸಂಘಟನೆಯ ಮೂಲಕ ರಾಜಕೀಯ ಜೀವನ ಆರಂಭಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ರಾಜಕಾರಣದ ಆಳ-ಅಗಲದ ಸುದೀರ್ಘ ಅನುಭವವಿದೆ. ಇತ್ತೀಚಿನ ವರ್ಷಗಳಲ್ಲಿ ಐಟಿ ಮತ್ತು ಇಡಿ ತನಿಖೆ ಎದುರಿಸಿ, ಜೈಲುವಾಸದ ಕಠಿಣ ದಿನಗಳನ್ನು ಕಂಡು, ಎಲ್ಲ ಸವಾಲುಗಳನ್ನು ಮೀರಿ ನಿಂತ ಡಿಕೆಶಿ, ಇಂದು ಕರ್ನಾಟಕದ ಅತ್ಯುನ್ನತ ಮುಖ್ಯಮಂತ್ರಿ ಪಟ್ಟವನ್ನು ಅಲಂಕರಿಸುತ್ತಿರುವುದು ಅವರ ಬೆಂಬಲಿಗರಲ್ಲಿ ಸಡಗರ ಮೂಡಿಸಿದೆ.



