ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಮೂವರು ಬೆಸ್ಕಾಂ ಅಧಿಕಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಬೆಂಗಳೂರಿನ ವೈಟ್ ಫೀಲ್ಡ್‌ನ ಕಾಡುಗೋಡಿಯಲ್ಲಿ ಈ ಅವಘಢ ಸಂಭವಿಸಿದೆ. ತಾಯಿ ಸೌಂದರ್ಯ ಮತ್ತು ಮಗಳು ಲೀಲಾ ಮೃತ ದುರ್ದೈವಿಗಳು.
ತಾಯಿ ಮತ್ತು ಮಗಳು ತಮಿಳುನಾಡಿನಿಂದ ಬೆಂಗಳೂರಿನಲ್ಲಿರುವ ಮನೆಗೆ ಬರುತ್ತಿದ್ದ ವೇಳೆ ರಸ್ತೆ ಬದಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಕಾಣಿಸದೆ ತುಳಿದಿದ್ದಾರೆ. ವಿದ್ಯುತ್ ಪ್ರವಹಿಸಿ ತಾಯಿ ಹಾಗೂ ಮಗಳಿಗೆ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸಜೀವ ದಹನವಾಗಿದ್ದಾರೆ.
ಬೆಸ್ಕಾಂ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆ ಎಂದು ಕಾಡುಗೋಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.