ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಕರಡಿ ಸಂಗಣ್ಣ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ಕರಡಿ ಸಂಗಣ್ಣ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಪತ್ರವನ್ನು ಸಲ್ಲಿಕೆ ಮಾಡಿದ್ದು, ಇದನ್ನು ಅಂಗೀಕಾರ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಕೊಪ್ಪಳ ಲೋಕಸಭಾ ಕ್ಷೇತ್ರದ ಹಾಲಿ ಸಂಸದರೂ ಆಗಿದ್ದ ಕರಡಿ ಸಂಗಣ್ಣ ಅವರಿಗೆ ಈ ಬಾರಿ ಲೋಕಸಭೆ ಟಿಕೆಟ್ ಕೊಡದೇ ಹೊಸ ಅಭ್ಯರ್ಥಿ ಡಾ.ಬಸವರಾಜ್ ಕ್ಯಾವಟರ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ಆರಂಭದಿಂದಲೂ ಅಸಮಾಧಾನ ಹೊರ ಹಾಕಿದ್ದ ಕರಡಿ ಸಂಗಣ್ಣ ಅವರು, ನಮ್ಮ ಲೋಕಸಭಾ ಟಿಕೆಟ್‌ ಅನ್ನು ಪುನಃ ಬದಲಾಯಿಸಿ ತಮಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದರು.

ರಾಜ್ಯದಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸಲ್ಲಿಕೆ ಮಾಡಿದ್ದಾರೆ. ಮತ್ತೊಂದೆಡೆ, ಇನ್ನು ಕೆಲವು ದಿನಗಳವರೆಗೆ ಸಂಸದ ಸ್ಥಾನ ಇರುತ್ತಿದ್ದರೂ ಅದನ್ನೂ ಉಳಿಸಿಕೊಳ್ಳದೇ ಸಂಸದ ಸ್ಥಾನಕ್ಕೂ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಇ-ಮೇಲ್‌ ಮೂಲಕ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ.

ನಾಳೆ‌ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ 
ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿರುವ ಕಾಂಗ್ರೆಸ್‌ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿಯೇ ಕರಡಿ ಸಂಗಣ್ಣ ಸಂಸದ ಸ್ಥಾನ ಹಾಗೂ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಶಾಸಕ ಲಕ್ಷ್ಮಣ ಸವದಿ ಅವರು ನಿನ್ನೆ ಕರಡಿ ಸಂಗಣ್ಣ ಅವರನ್ನು ಭೇಟಿ ಮಾಡಿ ಅಂತಿಮವಾಗಿ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಚರ್ಚೆ ಮಾಡಿದ್ದರು. ಮಂಗಳವಾರ ಬೆಳಗ್ಗೆ ಕೊಪ್ಪಳ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರು ಕರಡಿ ಸಂಗಣ್ಣ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ಮಾಡಿದ್ದರು. ಈಗ ಬಿಜೆಪಿ ತೊರೆದಿರುವ ಕರಡಿ ಸಂಗಣ್ಣ ನಾಳೆ ಕಾಂಗ್ರೆಸ್‌ ಸೇರ್ಪಡೆ ಆಗಲಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!