ಹೊಸ ದಿಗಂತ ವರದಿ , ಹಾಸನ:
ರೈತರಿಂದ ನೇರವಾಗಿ ನಾಫೆಡ್ ಮೂಲಕ ಬೆಂಬಲ ಬೆಲೆಯಲ್ಲಿ ಕೊಬ್ಬರಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಮುಂದುವರಿಸಬೇಕು ಹಾಗೂ ಆ ವಿಚಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು ಎಂದು ಸಂಸದ ಪ್ರಜ್ವಲ್ ರೇವಣ್ಣ ಅವರು ಕೇಂದ್ರ ಬುಡಕಟ್ಟು ವ್ಯವಹಾರಗಳು, ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವ ಅರ್ಜುನ್ ಮುಂಡಾ ಹಾಗೂ ಶೊಭಾ ಕರಂದ್ಲಾಜೆ ಅವರಿಗೆ ಪತ್ರ ಬರೆದಿದ್ದಾರೆ.
ದಶಕಕ್ಕೂ ಹೆಚ್ಚು ಕಾಲದಿಂದ ತೆಂಗು ಇಳುವರಿ ಕಡಿಮೆ ಆಗುತ್ತಿರುವ ಹಿನ್ನೆಲೆ ಕರ್ನಾಟಕದಲ್ಲಿ ರೈತರು ದೀರ್ಘ ಕಾಲದ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ನಾಫೆಡ್‌ನಿಂದ ೬೨ ಸಾವಿರ ಮೆಟ್ರಿಕ್ ಟನ್ ಕೊಬ್ಬರಿ ಖರೀದಿ ಮಾಡಲಾಗಿದ್ದು, ಇನ್ನೂ ೬೦ ಸಾವಿರ ಮೆಟ್ರಿಕ್ ಟನ್ ಹಾಗೆಯೇ ಉಳಿದಿದೆ. ಈ ಕಾರಣದಿಂದ ಕನಿಷ್ಠ ೫೦-೫೫ ಸಾವಿರ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಲು ಮುಂದಾದರೆ ರೈತರಿಗೆ ಅನುಕೂಲ ಆಗಲಿದೆ ಎಂದು ಮನವಿ ಮಾಡಿದ್ದಾರೆ.
ನಾಫೆಡ್ ಖರೀದಿಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು, ಕೆಲವು ಅಧಿಕಾರಿಗಳೂ ಭ್ರಷ್ಟಾಚಾರದಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗುತ್ತಿದೆ. ಈ ಲಾಬಿಯಿಂದ ರೈತರು ತೊಂದರೆ ಅನುಭವಿಸುತ್ತಿದ್ದು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ರೈತರನ್ನು ಈ ಸಂಕಷ್ಟಗಳಿಂದ ಪಾರು ಮಾಡಬೇಕು ಎಂದು ಮನವಿ ಪತ್ರದಲ್ಲಿ ವಿವರಿಸಿದ್ದಾರೆ.