March 15, 2026
Sunday, March 15, 2026
spot_img

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಸಂಸದ ಯದುವೀರ್‌ ಮನವಿ

ಹೊಸ ದಿಗಂತ ವರದಿ,ಮಡಿಕೇರಿ:

ಅನಿವಾರ್ಯ ಕಾರಣಗಳಿಂದ ನನೆಗುದಿಗೆ ಬಿದ್ದಿರುವ ಮೈಸೂರು-ಕುಶಾಲನಗರ ರೈಲ್ವೆ ಯೋಜನೆಗೆ ಮರು ಚಾಲನೆ ನೀಡಬೇಕು. ಪ್ರಮುಖವಾಗಿ ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಲು ಮಧ್ಯ ಪ್ರವೇಶಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ಅವರು, ಕೆಲವು ಪ್ರಕ್ರಿಯೆ ಪೂರ್ಣಗೊಂಡಿದ್ದರೂ, ಯೋಜನೆ ನಿಧಾನಗತಿಯಲ್ಲಿ ಸಾಗಿದೆ ಅಥವಾ ನನೆಗುದಿಗೆ ಬಿದ್ದಿದೆ ಎಂದಿದ್ದಾರೆ.

ಯೋಜನೆಗೆ ಚಾಲನೆ ನೀಡಬೇಕು: ಮೈಸೂರು (ಬೆಳಗೊಳ) – ಕುಶಾಲನಗರ (89 ಕಿಮೀ) ಯೋಜನೆಯ ಅಂತಿಮ ಸ್ಥಳ ಸಮೀಕ್ಷೆ ಪೂರ್ಣಗೊಂಡಿದ್ದರೂ, ಕಾರಣಾಂತರಗಳಿಂದ ಸ್ಥಗಿತಗೊಂಡಿದೆ. ಈ ಯೋಜನೆಗೆ ಪುನರುಜ್ಜೀವನಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಚಿವರು ಮಧ್ಯಪ್ರವೇಶಿಸುವಂತೆ ಮನವಿ ಮಾಡಲಾಗಿದೆ ಎಂದು ಯದುವೀರ್‌ ತಿಳಿಸಿದ್ದಾರೆ.

ಕೊಡಗು ಜಿಲ್ಲೆಗೆ ಸೂಕ್ತ ರೈಲು ಸಂಪರ್ಕವಿಲ್ಲದೆ ಪ್ರಮುಖ ಪ್ರವಾಸೋದ್ಯಮ ಮತ್ತು ತೋಟಗಾರಿಕೆ ಕ್ಷೇತ್ರಗಳ ಆರ್ಥಿಕತೆಗೆ ಭಾರಿ ತೊಂದರೆಯಾಗುತ್ತಿದೆ. ಸಂಪೂರ್ಣವಾಗಿ ಸ್ಯಾಚುರೇಟೆಡ್ ರಸ್ತೆ ಸಂಪರ್ಕವನ್ನೇ ಬೆಳೆಗಾರರು ಅವಲಂಬಿಸಿರುವುದನ್ನು ಪತ್ರದಲ್ಲಿ ವಿವರಿಸಲಾಗಿದೆ ಎಂದು ಸಂಸದರು ಹೇಳಿದ್ದಾರೆ.

ಸುಸ್ಥಿರ ಪ್ರವಾಸೋದ್ಯಮಕ್ಕೆ ಅವಕಾಶ: ಈ ಯೋಜನೆಯು ಕೊಡಗು ಜಿಲ್ಲೆಯಲ್ಲಿ ಸುಸ್ಥಿರ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೇರಳ ಅವಕಾಶ ಒದಗಿಸುತ್ತದೆ. ಕೃಷಿ-ತೋಟಗಾರಿಕೆ ಪೂರೈಕೆ ಸರಪಳಿಗಳನ್ನು ಬಲಪಡಿಸುತ್ತದೆ ಮತ್ತು ಕೊಡಗನ್ನು ಮೈಸೂರು ಮತ್ತು ಬೆಂಗಳೂರಿನ ಬೆಳವಣಿಗೆಯ ಕಾರಿಡಾರ್‌ಗಳೊಂದಿಗೆ ಸಂಯೋಜಿಸುತ್ತದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಯದುವೀರ್‌ ಒಡೆಯರ್‌ ವಿವರಿಸಿದ್ದಾರೆ.

ಈ ನಿಟ್ಟಿನಲ್ಲಿ ರೈಲ್ವೆ ಸಚಿವಾಲಯವು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ. ರೈಲ್ವೆ ಸಚಿವಾಲಯ ಹಾಗೂ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಎಲ್ಲಾ ರೀತಿಯಲ್ಲೂ ಕ್ರಮ ಕೈಗೊಳ್ಳಲಾಗುವುದು. ಆ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ ಎಂದು ಸಂಸದರು ಹೇಳಿದ್ದಾರೆ.

ಮನವಿ ಸ್ವೀಕರಿಸಿರುವ ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌, ಕೂಡಲೇ ಪರಿಶೀಲನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂಬ ಭರವಸೆ ನೀಡಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !