Sunday, August 14, 2022

Latest Posts

ಶ್ರೀ ಧರ್ಮಸ್ಥಳ- ಕುಕ್ಕೆ ಕ್ಷೇತ್ರದಲ್ಲಿ ವಿಧಿಸಿದ್ದ ನಿರ್ಬಂಧಗಳ ತೆರವು: ಸೇವೆಗೆ ಅವಕಾಶ

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ವಿಧಿಸಿದ್ದ ನಿರ್ಬಂಧಗಳನ್ನು ಶನಿವಾರ ತೆರವುಗೊಳಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹಾಗೂ ಪಾಸಿಟಿವಿಟಿ ದರ ಇಳಿಕೆಯಾಗುತ್ತಿರುವುದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದೆ ವಿಧಿಸಲಾದ ನಿರ್ಬಂಧ ಹಿಂಪಡೆದು, ಸೇವೆಗಳನ್ನು ನಡೆಸಲು ಹಾಗೂ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಕೆಲ ಷರತ್ತುಗಳನ್ನು ಪಾಲಿಸುವ ನಿಬಂಧನೆಗೆ ಒಳಪಟ್ಟು ಅನುಮತಿ ನೀಡಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಶನಿವಾರ ಆದೇಶ ಹೊರಡಿಸಿದ್ದಾರೆ.
ದೇವಾಲಯಗಳಲ್ಲಿ ಕೋವಿಡ್ ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ದೇವಳದ ಆಡಳಿತ ವರ್ಗ ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಹೊಂದಿರಬೇಕು, ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿ ಸೇರಿದಂತೆ ಎಲ್ಲಾ ವರ್ಗದವರು ಪ್ರತಿ 15 ದಿನಗಳಿಗೊಮ್ಮೆ ಆರ್‌ಟಿಪಿಸಿಆರ್ ಟೆಸ್ಟ್ ಮಾಡಿಸಿ ನೆಗೆಟಿವ್ ವರದಿ ಹೊಂದಿರಬೇಕು.
ದೇವಾಲಯಗಳಿಗೆ ಸೇವೆಗೆ ಆಗಮಿಸುವ ಭಕ್ತರು 2 ಡೋಸ್ ಕೋವಿಡ್ ಲಸಿಕೆ ಪಡೆದಿದ್ದರೂ ಸಹ ಕಡ್ಡಾಯವಾಗಿ 72 ಗಂಟೆಗಳಿಗಿಂತ ಮುಂಚಿತವಾಗಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿದ್ದಲ್ಲಿ ಮಾತ್ರ ಸೇವೆಗೆ ಅವಕಾಶ ನೀಡಬೇಕು. ದೇವಾಲಯಗಳಿಗೆ ಬರುವ ಭಕ್ತರಿಗೆ ಕೋವಿಡ್ ಲಸಿಕೆ ಪಡೆಯುವ ಬಗ್ಗೆ ಸಲಹೆಗಳನ್ನು ನೀಡುವ ಕುರಿತು ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಅಲ್ಲಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು, ದೇವಾಲಯಕ್ಕೆ ಬರುವ ಸಾರ್ವಜನಿಕರು ಕೋವಿಡ್ ಲಸಿಕೆ ಪಡೆಯದಿದ್ದಲ್ಲಿ, ಅಂತಹವರುಗಳಿಗೆ ಲಸಿಕೆ ನೀಡಲು ಅನುಕೂಲವಾಗುವಂತೆ ಸಂಬಂಧಪಟ್ಟ ತಾಲೂಕು ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ದೇವಾಲಯಗಳಲ್ಲಿ ಕೋವಿಡ್ ಲಸಿಕಾ ಕೇಂದ್ರಗಳನ್ನು ತೆರೆಯಲು ಹಾಗೂ ಜನಸಂದಣಿಯಾಗದಂತೆ ಲಸಿಕೆ ನೀಡಲು ಕ್ರಮ ವಹಿಸಬೇಕು, ದೇವಾಲಯಗಳಲ್ಲಿ ನಡೆಯುವ ಪ್ರಮುಖ ಸೇವೆಗಳನ್ನು (ಅಂದರೆ, ಸರ್ಪಸಂಸ್ಕಾರ, ಆಶ್ಲೇಷ ಬಲಿ, ಪಂಚಾಮೃತ ಮಹಾಭಿಷೇಕ, ನಾಗಪ್ರತಿಷ್ಠೆ ಸೇವೆಗಳು) ಆದಷ್ಟು ಮಿತಿಗೊಳಿಸುವುದು ಹಾಗೂ ಜನಸಂದಣಿಯಾಗದಂತೆ ದಿನವೊಂದಕ್ಕೆ ದೇವಳದ ಸ್ಥಳ ಸಾಮರ್ಥ್ಯವನ್ನು ಹೊಂದಿಕೊಂಡು ಕನಿಷ್ಟ ಸಂಖ್ಯೆಯಲ್ಲಿ ಸೇವೆಗಳನ್ನು ನಡೆಸಲು ವ್ಯವಸ್ಥೆ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss