ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರ್ದೇಶನ ಕೋರಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ,ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಹಾಗೂ ಇತರರಿಗೆ ನೊಟೀಸ್ ಜಾರಿ ಮಾಡಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿ.ಎಂ ಅವರಿಗೆ 14 ನಿವೇಶನಗಳನ್ನು ಅಕ್ರಮ ಹಂಚಿಕೆ ಬಗ್ಗೆ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ಈಗಾಗಲೇ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.
ಆದ್ರೆ ಸ್ನೇಹಮಯಿ ಕೃಷ್ಣ ಅವರುಲೋಕಾಯುಕ್ತ ಪಾರದರ್ಶಕ ತನಿಖೆ ನಡೆಸಿಲ್ಲ ಎಂದು ಆರೋಪಿಸಿದ್ದು, ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆ(ಸಿಬಿಐ)ಗೆ ವರ್ಗಾಯಿಸಬೇಕೆಂಬ ಮನವಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಫೆಬ್ರವರಿ 7 ರಂದು ತಿರಸ್ಕರಿಸಿತ್ತು. ಈ ಆದೇಶ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.
ಇಂದು ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಹಾಗೂ ಇತರರಿಗೆ ನೋಟಿಸ್ ನೀಡಿದ್ದು, ಏಪ್ರಿಲ್ 28ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಲಾಗಿದೆ.