ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ: ಸಚಿವ ಮುರುಗೇಶ್ ನಿರಾಣಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌, ಬೆಂಗಳೂರು:
ಮುಂದಿನ ನವೆಂಬರ್ ನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ₹ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಆಗಮಿಸಿದ ವೇಳೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಿಗದಿಯಾಗಿರುವಂತೆ ನ.2ರಿಂದ 4ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ವಿಶ್ವದ ಮುಂಚೂಣಿ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಅಂದಾಜು 5 ಲಕ್ಷ ಕೋಟಿ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದರು.
ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಾನು ವಿಶ್ವದ ಪ್ರಮುಖ ಉದ್ಯಮಿಗಳನ್ನು ಭೇಟಿಯಾಗಿ ಬಂಡವಾಳ ಹೂಡಿಕೆ ಸಂಬಂಧ ಮಾತುಕತೆ ನಡೆಸಿದ್ದೇವೆ. ಇದೊಂದು ಯಶಸ್ವಿ ಪ್ರವಾಸ ಎಂದು ಅವರು ಬಣ್ಣಿಸಿದರು.
ನಾಲ್ಕು ದಿನ ನಾವು ವಿವಿಧ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಿದ್ದೇವೆ. ಬಂಡವಾಳ ಹೂಡಿಕೆ ಮಾಡುವಂತೆ ನಾವು ಮುಂದಿಟ್ಟ ಪ್ರಸ್ತಾವನೆಗೆ ಅನೇಕ ಉದ್ಯಮಿಗಳು ಒಪ್ಪಿಗೆ ಸೂಚಿಸಿದ್ದಾರೆ. ಅಂದಾಜು ಒಂದು ಲಕ್ಷ ಕೋಟಿ ಬಂಡವಾಳ ರಾಜ್ಯದಲ್ಲಿ ಹೂಡಿಕೆಯಾಗಲಿದೆ. ಬಂಡವಾಳ ಹೂಡಿಕೆಯಾಗುವುದರಿಂದ ರಾಜ್ಯದ ಜಿಡಿಪಿ ದರವು ಏರಿಕೆಯಾಗಲಿದೆ ಎಂದರು.
ರಾಜ್ಯದ ಆಹ್ಲಾದಕರ ವಾತಾವರಣ, ಉದ್ಯಮಿಗಳ ಪರವಾದ ಸರ್ಕಾರ, ಕೈಗಾರಿಕಾ ಸ್ನೇಹಿ ನೀತಿಗಳು, ಉದ್ಯಮಿಗಳಿಗೆ ಬೇಕಾಗಿರುವ ರಸ್ತೆ, ನೀರು, ವಿದ್ಯುತ್ ಸೇರಿದಂತೆ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳು ರಾಜ್ಯದಲ್ಲಿರುವುದರರಿಂದ ಉದ್ಯಮಿಗಳು ಬಂಡವಾಳ ಹೂಡಿಕೆಗೆ ಮುಂದೆ ಬಂದಿದ್ದಾರೆ. ಇನ್ನು ಕೆಲವೇ ವರ್ಷಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗಿದೆ ಎಂಬು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!