ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಅನುದಾನ ಕಡಿತಗೊಳಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಶಾಸಕ ಮುನಿರತ್ನ ಹಾಗೂ ಅವರ ಬೆಂಬಲಿಗರು ಸರ್ಕಾರದ ವಿರುದ್ಧ ಇಂದು ಪ್ರತಿಭಟನೆ ಕೈಗೊಂಡಿದ್ದಾರೆ.
ವಿಧಾನಸೌಧದ ಮುಂಭಾಗ ಗಾಂಧಿ ಪ್ರತಿಮೆ ಎದುರು ಬೆಂಬಲಿಗರ ಜೊತೆಗೂಡಿ ಶಾಸಕ ಮುನಿರತ್ನ ಅವರು ಧರಣಿ ಕುಳಿತಿದ್ದರು. ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿಭಟನೆ ನಿಲ್ಲಿಸುವಂತೆ ಮುನಿರತ್ನ ಅವರ ಬಳಿ ಮನವಿ ಮಾಡಿದ್ದು, ಇದಕ್ಕೆ ಅವರು ಒಪ್ಪಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕರನ್ನು ಹೊರತುಪಡಿಸಿ ಪ್ರತಿಭಟನಾ ನಿರತ 25ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದೀಗ ಗಾಂಧಿ ಪ್ರತಿಮೆ ಬಳಿ ಮುನಿರತ್ನ ಒಬ್ಬರೇ ಸರ್ಕಾರದ ವಿರುದ್ಧ ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ಮುಂದುವರೆಸಿದ್ದಾರೆ.
ತಮ್ಮ ಕ್ಷೇತ್ರಕ್ಕೆ ಬಿಡುಗಡೆಯಾಗಿದ್ದ ಅನುದಾನವನ್ನು ಕಡಿತಗೊಳಿಸಿ ಯಶವಂತಪುರ, ಬ್ಯಾಟರಾಯನಪುರ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗಿದೆ. ಆರ್.ಆರ್.ನಗರ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಶಾಸಕರು ಆಗ್ರಹಿಸಿದ್ದಾರೆ.