ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಸುರಕ್ಷತೆ ಕುರಿತ ಆತಂಕ ಹೆಚ್ಚುತ್ತಿರುವ ನಡುವೆಯೇ, ಮೈಮನ್‌ಸಿಂಗ್ ಜಿಲ್ಲೆಯ ಭಾಲುಕಾ ಪ್ರದೇಶದಲ್ಲಿ ನಡೆದ ಹಿಂದು ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಏಳು ಮಂದಿಯನ್ನು ಬಂಧಿಸಲಾಗಿದೆ.
ದೀಪು ಚಂದ್ರ ದಾಸ್ ಎಂಬ ಗಾರ್ಮೆಂಟ್ ಕಾರ್ಖಾನೆ ಕಾರ್ಮಿಕನನ್ನು ಸ್ಥಳೀಯ ನಿವಾಸಿಗಳ ಗುಂಪು ಥಳಿಸಿ ಹತ್ಯೆ ಮಾಡಿತ್ತು. ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾನೆ ಎಂಬ ಆರೋಪದ ಮೇಲೆ ಈ ಕೃತ್ಯ ನಡೆದಿದ್ದು, ಹತ್ಯೆಯ ಬಳಿಕ ಮೃತದೇಹವನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಕರಣದ ತನಿಖೆ ನಡೆಸಿದ ರ‍್ಯಾಪಿಡ್ ಆಕ್ಷನ್ ಬೆಟಾಲಿಯನ್ ವಿವಿಧ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿ ಏಳು ಆರೋಪಿಗಳನ್ನು ವಶಕ್ಕೆ ಪಡೆದಿದೆ.
ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಯೂನಸ್ ಸರ್ಕಾರ, ಇದು ಮಾನವೀಯ ಮೌಲ್ಯಗಳಿಗೆ ವಿರುದ್ಧವಾದ ಅಪರಾಧ ಎಂದು ಹೇಳಿದೆ. ಸಮಾಜದಲ್ಲಿ ದ್ವೇಷ ಮತ್ತು ಹಿಂಸೆಗೆ ಅವಕಾಶ ನೀಡುವುದಿಲ್ಲ ಎಂದು ಸರ್ಕಾರ ಎಚ್ಚರಿಕೆ ನೀಡಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಂಪೂರ್ಣ ಬದ್ಧತೆ ವ್ಯಕ್ತಪಡಿಸಿದೆ.

