ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಕೋಲಾರದ ವಸತಿ ಶಾಲೆಯ ಒಂಬತ್ತನೇ ತರಗತಿಯ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಕೋಲಾರ ಜಿಲ್ಲೆಯ ಮುಳಬಾಗಿಲು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು ಮತ್ತು ಆರು ಶಿಕ್ಷಕರ ತಂಡ ಮಂಗಳವಾರ ತಮ್ಮ ಶಾಲಾ ಪ್ರವಾಸದ ಅಂಗವಾಗಿ ಮುರುಡೇಶ್ವರಕ್ಕೆ ತೆರಳಿತ್ತು. ಪೊಲೀಸರ ಪ್ರಕಾರ, ಸಂಜೆ 5.30ರ ಸುಮಾರಿಗೆ ಶಿಕ್ಷಕರು, ವಿದ್ಯಾರ್ಥಿಗಳ ಜೊತೆಗೆ ಬೀಚ್‌ಗೆ ತೆರಳಿದರು. ಜೀವರಕ್ಷಕರ ಎಚ್ಚರಿಕೆಯ ಹೊರತಾಗಿಯೂ, ಏಳು ವಿದ್ಯಾರ್ಥಿಗಳು ಸಮುದ್ರದ ಅಲೆಗಳಿಗೆ ಸಿಕ್ಕಿ ಕೊಚ್ಚಿ ಹೋಗಿದ್ದರು. ಈ ವೇಳೆ ಮೂವರು ವಿದ್ಯಾರ್ಥಿಗಳನ್ನು ಜೀವರಕ್ಷಕರು ಮತ್ತು ಇತರ ಏಜೆನ್ಸಿಗಳ ಸಹಾಯದಿಂದ ರಕ್ಷಿಸಲಾಗಿತ್ತು. ಆದರೆ ನಾಲ್ವರು ಸಮುದ್ರ ಪಾಲಾಗಿದ್ದರು.
ನಿನ್ನೆಯೇ ಓರ್ವ ವಿದ್ಯಾರ್ಥಿನಿ ಶ್ರವಂತಿ ಮೃತದೇಹವನ್ನು ಹೊರತೆಗೆಯಲಾಗಿತ್ತು. ಇಂದು ಬೆಳಿಗ್ಗೆ ಮೂವರು ಬಾಲಕಿಯರ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 106 (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಪ್ರಕರಣವನ್ನು ದಾಖಲಿಸಲಾಗಿದ್ದು ಎಲ್ಲಾ ಆರು ಶಿಕ್ಷಕರನ್ನು ಬಂಧಿಸಲಾಗಿದೆ ಎಂದು ಉತ್ತರ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ ತಿಳಿಸಿದ್ದಾರೆ.
ನಂತರ ಶಿಕ್ಷಕರನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಮೃತ ವಿದ್ಯಾರ್ಥಿನಿಯರನ್ನು 15 ವರ್ಷದ ಶ್ರವಂತಿ, ದೀಕ್ಷಾ, ಲಾವಣ್ಯ ಮತ್ತು ಲಿಪಿಕಾ ಎಂದು ಗುರುತಿಸಲಾಗಿದೆ.
ದುಃಖತಪ್ತ ಪೋಷಕರಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಮಾಡಿರುವ ಅವರು, ದುರಂತದಲ್ಲಿ ಸಾವನ್ನಪ್ಪಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ನಾನು ಉತ್ತರ ಕನ್ನಡ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ಜಿಲ್ಲಾಡಳಿತಕ್ಕೆ ವಿದ್ಯಾರ್ಥಿನಿಯರ ಮೃತದೇಹಗಳನ್ನು ಅವರ ಊರುಗಳಿಗೆ ಸಾಗಿಸಲು ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ ಎಂದರು.
ಇದೀಗ ಮೃತ ವಿದ್ಯಾರ್ಥಿನಿಯರ ಕುಟುಂಬಸ್ಥರಿಗೆ ಸಚಿವ ಬೈರತಿ ಸುರೇಶ್, ವೈಯಕ್ತಿಕವಾಗಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ಹಣ ಘೋಷಿಸಿದ್ದಾರೆ.
ಮೃತ ವಿದ್ಯಾರ್ಥಿನಿಯ ಕುಟುಂದವರಿಗೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.ಇದೀಗ ಸಚಿವ ಬೈರತಿ ಸುರೇಶ್, ವೈಯಕ್ತಿಕವಾಗಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ಹಣ ಘೋಷಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬೈರತಿ ಸುರೇಶ ಸರ್ಕಾರದ ಜೊತೆಗೆ ವೈಯಕ್ತಿಕಗಾಲಿ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸಿಬ್ಬಂದಿ ವಜಾ
ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರು ನೀರುಪಾಲು ಪ್ರಕರಣ ಸಂಬಂಧ ಶಾಲಾ ಪ್ರಾಂಶುಪಾಲೆ ಶಶಿಕಲಾರನ್ನು ಅಮಾನತು ಗೊಳಿಸಲಾಗಿದೆ. ಅಥಿತಿ ಉಪನ್ಯಾಕರು ಮತ್ತು ಡಿ ಗ್ರೂಪ್ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಆರೋಪ ಹಿನ್ನೆಲೆ ಪ್ರಾಂಶುಪಾಲೆಯನ್ನು ಅಮಾನತು ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಅದೇಶ ಹೊರಡಿಸಿದ್ದಾರೆ.