ಬಿಜೆಪಿ ರಾಜ್ಯಮಟ್ಟದ ಸಮಾವೇಶಕ್ಕೆ ಮುರುಘಾಮಠ ಸೇರಿದಂತೆ ಇಡೀ ಚಿತ್ರದುರ್ಗವೇ ಸಿಂಗಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್, ಚಿತ್ರದುರ್ಗ: 

ಮುರುಘಾಮಠದಲ್ಲಿ ಜೂ.18 ರಂದು ಬಿಜೆಪಿ ಪಕ್ಷದ ವತಿಯಿಂದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಭರದ ಸಿದ್ಧತೆ ಕೈಗೊಳ್ಳಲಾಗಿದೆ. ಮುರುಘಾಮಠ ಸೇರಿದಂತೆ ಇಡೀ ಚಿತ್ರದುರ್ಗವೇ ಸಿಂಗಾರಗೊಂಡಿದ್ದು, ನಗರದೆಲ್ಲ್ಲೆಡೆ ಬಿಜೆಪಿ ನಾಯಕರ ಫ್ಲೆಕ್ಸ್‌ಗಳು ಹಾಗೂ ಕಮಲ ಗುರುತಿನ ಧ್ವಜಗಳು ರಾರಾಜಿಸುತ್ತಿವೆ.
ನಗರದ ಗಾಂಧಿ ವೃತ್ತ, ಮದಕರಿ ನಾಯಕ ವೃತ್ತ, ಒನಕೆ ಓಬವ್ವ ವೃತ್ತ, ಎಸ್.ಬಿ.ಐ ವೃತ್ತ ಸೇರಿದಂತೆ ವಿವಿಧೆಡೆಗಳಲ್ಲಿ ಕೇಸರಿ ಬಟ್ಟೆಯ ಪಟ್ಟಿಗಳಿಂದ ಅಲಂಕರಿಸಲಾಗಿದೆ. ರಸ್ತೆಗಳ ಮಾರ್ಗದುದ್ದಕ್ಕೂ ಬಿಜೆಪಿ ಭಾವುಟಗಳನ್ನು ಕಟ್ಟಿ ಸಿಂಗರಿಸಲಾಗಿದೆ. ಅಲ್ಲಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಸೇರಿದಂತೆ ವಿವಿಧ ನಾಯಕರ ಫ್ಲೆಕ್ಸ್‌ಗಳನ್ನು ಹಾಕಲಾಗಿದೆ.
ನಗರದ ಪ್ರವೇಶ ದ್ವಾರಗಳಲ್ಲಿ ಸಮಾವೇಶಕ್ಕೆ ಆಗಮಿಸುವ ಜನಪ್ರತಿನಿಧಿಗಳನ್ನು ಸ್ವಾಗತಿಸಲು ಬೃಹದಾಕಾರದ ಸ್ವಾಗತ ಕಮಾನುಗಳನ್ನು ನಿರ್ಮಿಸಲಾಗಿದೆ. ಕೋನಗರದ ವಿವಿಧೆಡೆಗಳಲ್ಲಿ ನಾಲ್ಕು ಕಡೆಗಳಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ. ಸುಮಾರು ೪ ಸಾವಿರ ವಾಹನಗಳಿಗೆ ನಿಲುಗಡೆ ಮಾಡಲು ಸ್ಥಳಾವಕಾಶ ಕಲ್ಪಿಸಲಾಗಿದೆ.
ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಬೀದರ್, ಕಲ್ಬುರ್ಗಿ, ಕೊಪ್ಪಳ, ಶಿವಮೊಗ್ಗ, ಮಂಡ್ಯ ಹಾಗೂ ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ರಾಜ್ಯ ವಿವಿಧ ಜಿಲ್ಲೆಗಳಿಂದ ಬಿಜೆಪಿ ಬೆಂಬಲಿತ ಸ್ಥಳೀಯ ಸಂಸ್ಥೆಗಳ ಸದಸ್ಯರು ಸಮಾವೇಶಕ್ಕೆ ಆಗಮಿಸಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 6000 ಗ್ರಾ.ಪಂ.ಗಳ ಸದಸ್ಯರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ ಸದಸ್ಯರೂ ಸೇರಿದಂತೆ ಸುಮಾರು 10 ಸಾವಿರ ಸಂಖ್ಯೆಯ ಸದಸ್ಯರು ಭಾಗವಹಿಸುವ ನಿರೀಕ್ಷೆ ಇದೆ.
ಕಾರ್ಯಕ್ರಮದ ಇಡೀ ವೇದಿಕೆಯನ್ನು ಸಂಪೂರ್ಣ ಡಿಜಲೀಕರಣ ಮಾಡಲಾಗಿದೆ. ವೇದಿಕೆಯ ಕೆಳಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಕುರಿತು ಮಾಹಿತಿ ನೀಡುವ ಉದ್ದೇಶದಿಂದ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ. ವಿವಿಧೆಡೆಗಳಿಂದ ಸಮಾವೇಶಕ್ಕೆ ಆಗಮಿಸುವ ಪ್ರತಿನಿಧಿಗಳಿಗೆ ನೋಂದಣಿ ಮಾಡಿಕೊಳ್ಳಲು 40 ನೊಂದಣಿ ಕೇಂದ್ರಗಳನ್ನು ವ್ಯವಸ್ಥೆ ಮಾಡಲಾಗಿದೆ. ಒಂದು ಆರೋಗ್ಯ ಕೇಂದ್ರ ಹಾಗೂ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ.
ಅನುಭವ ಮಂಟಪದ ಸಭಾಂಗಣದೊಳಗೆ ಸುಮಾರು 5000 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಅದರಂತೆ ಹೊರಭಾಗದಲ್ಲಿ 2500 ಆಸನಗಳ ವ್ಯವಸ್ಥೆ ಮಾಡಲಾಗಿದೆ. ಅವರಿಗೆ ಕಾರ್ಯಕ್ರಮ ವೀಕ್ಷಿಸಲು ಎಲ್‌ಇಡಿ ಪರದೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಸಭಾಂಗಣದ ಹೊರಗೆ ಬಣ್ಣ ಬಣ್ಣದ ರಂಗೋಲಿಗಳನ್ನು ಬಿಡಿಸಲಾಗಿದೆ. ಸಮಾವೇಶಕ್ಕೆ ಬರುವ ಗಣ್ಯರನ್ನು ಜಾನಪದ ಕಲಾತಂಡಳೊಂದಿಗೆ ಸ್ವಾಗತಿಸಲಾಗುವುದು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಮಾವೇಶ ಉದ್ಘಾಟಿಸುವರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸರ್ಕಾರದ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಎಲ್ಲ ಜನಪ್ರಿನಿಧಿಗಳು ಸಮಾವೇಶದಲ್ಲಿ ಭಾಗವಹಿಸುವರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!