ಹೊಸದಿಗಂತ ವರದಿ ಶಿವಮೊಗ್ಗ:
ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನದಲ್ಲಿ ಒಂದು ಸ್ಥಾನವನ್ನೂ ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ನೀಡದೇ ಹೋದರೆ ಮುಂದಿನ ಚುನಾವಣೆಗಳಲ್ಲಿ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಮುಖಂಡ ಆಸೀಫ್ ಮಸೂದ್ ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಯಾರಿಗೆ ನೀಡಲಿದೆ ಎಂಬ ಪಟ್ಟಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಅದರಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಐದು ಜನರಿಗೆ ಅಧ್ಯಕ್ಷ ಸ್ಥಾನ ದೊರೆಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಯಾವೊಬ್ಬ ಮುಸ್ಲಿಂ ಮುಖಂಡರ ಹೆಸರೂ ಇಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಗಿದ್ದ ಹೆಚ್.ಸಿ.ಯೋಗೀಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ವಿಧಾನ ಪರಿಷತ್ ಸದಸ್ಯರು ಎಲ್ಲರೂ ಬಂದು ನಮ್ಮ ಸಮಾಜದ ಹಿರಿಯರ ಎದುರು ಆಣೆ ಪ್ರಮಾಣ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪರ ಮತ ಹಾಕಿದರೆ ಸೂಡಾ( ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಕಾರ) ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಮುಖಂಡರಿಗೆ ಕೊಡಿಸುವುದಾಗಿ ವಾಗ್ದಾನ ಮಾಡಿದ್ದರು ಎಂದು ತಿಳಿಸಿದರು.
ಅದರಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ಮುಸ್ಲಿಂ ಮುಖಂಡರು ಚುನಾವಣೆಯಲ್ಲಿ ಸಾಕಷ್ಟು ಶ್ರಮ ಹಾಕಿದ್ದಾರೆ. ಶೇ.98 ರಷ್ಟು ಮುಸ್ಲಿಂ ಮತಗಳು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಗುವಂತೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವಲ್ಲಿ ಮುಸ್ಲಿಂ ಮತಗಳು ನಿರ್ಣಾಯಕ ಪಾತ್ರ ವಹಿಸಿವೆ. ಹಾಗಿರುವಾಗ ಕೊಟ್ಟ ಮಾತನ್ನು ಈಗ ಮರೆಯಬಾರದು. ಇದು ನಮ್ಮ ನ್ಯಾಯಯುತ ಹಕ್ಕಾಗಿದೆ. ಕಡೆಗಣಿಸಿದರೆ ಅದರಿಂದ ಮುಂದೆ ಬೇರೆ ಪರಿಣಾಮ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಮುಖಂಡರಾದ ಅಲ್ತಾಫ್ ಫರ್ವೇಜ್, ನಯಾಜ್ ಅಹಮದ್, ಜಾವೆದ್, ಮುಹಮದ್ ಹುಸೇನ್, ಅಕ್ಬರ್, ಗೌಸ ಮೊದಲಾದವರು ಇದ್ದರು.