ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರಿಂದ ಬಾಂಗ್ಲಾದೇಶದ ಎಡಗೈ ವೇಗಿ ಮುಸ್ತಾಫಿಜುರ್ ರೆಹಮಾನ್ ನನ್ನು ಹೊರಗಿಟ್ಟಿರುವ ಬೆಳವಣಿಗೆ ಇದೀಗ ಕ್ರಿಕೆಟ್ ವಲಯದಲ್ಲಿ ರಾಜಕೀಯ ಹಾಗೂ ಆಡಳಿತಾತ್ಮಕ ಚರ್ಚೆಗೆ ಕಾರಣವಾಗಿದೆ. ಈ ತೀರ್ಮಾನದ ಬೆನ್ನಲ್ಲೇ ಭಾರತ–ಬಾಂಗ್ಲಾದೇಶ ನಡುವಿನ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಹಾಗೂ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ತಂಡದ ಭಾಗವಹಿಸುವಿಕೆ ಕುರಿತು ಅನುಮಾನಗಳು ಎದ್ದಿವೆ.
ಈ ವಿಷಯಕ್ಕೆ ಸಂಬಂಧಿಸಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಅಧ್ಯಕ್ಷ ಅಮೀನುಲ್ ಇಸ್ಲಾಂ ಬುಲ್ಬುಲ್ ಪ್ರತಿಕ್ರಿಯೆ ನೀಡಿದ್ದು, ಮುಸ್ತಾಫಿಜುರ್ ವಿಚಾರ ಮತ್ತು ಟಿ20 ವಿಶ್ವಕಪ್‌ನಲ್ಲಿ ತಂಡದ ಪಾಲ್ಗೊಳ್ಳುವಿಕೆ ಬಗ್ಗೆ ಐಸಿಸಿಯೊಂದಿಗೆ ಅಧಿಕೃತ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. “ಈ ಎಲ್ಲ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಬಿಸಿಬಿ ತನ್ನ ನಿಲುವನ್ನು ಐಸಿಸಿಗೆ ತಿಳಿಸಲಿದೆ” ಎಂದು ಅವರು ಹೇಳಿದ್ದಾರೆ.
ಇದೇ ವೇಳೆ, ಬಾಂಗ್ಲಾದೇಶದ ಮಾಜಿ ಕ್ರೀಡಾ ಸಚಿವಾಲಯದ ಸಲಹೆಗಾರ ಆಸಿಫ್ ಮಹಮೂದ್ ಐಪಿಎಲ್ ನಿರ್ಧಾರವನ್ನು ಖಂಡಿಸಿದ್ದಾರೆ. ಭಾರತವು ಅಂತಾರಾಷ್ಟ್ರೀಯ ಕ್ರಿಕೆಟ್ ಟೂರ್ನಿಗಳನ್ನು ಆಯೋಜಿಸಲು ಯೋಗ್ಯವಲ್ಲ, ಇಂತಹ ಧರ್ಮಾಂಧ ದೇಶವು ಎಂದಿಗೂ ಅಂತಾರಾಷ್ಟ್ರೀಯ ಕ್ರೀಡಾಕೂಟವನ್ನು ಆಯೋಜಿಸಬಾರದು. ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ಈ ವಿಷಯದಲ್ಲಿ ಬಾಂಗ್ಲಾ ಸರ್ಕಾರ ಮತ್ತು ಇತರ ಕ್ರಿಕೆಟ್ ಮಂಡಳಿಗಳು ಬಿಸಿಸಿಐ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಯಲ್ಲಾಪುರ ಹತ್ಯೆ ಪ್ರಕರಣ: ಆರೋಪಿ ಪಾತಾಳದಲ್ಲಿದ್ದರೂ ಎಳೆದು ತನ್ನಿ: ಶಿವರಾಮ ಹೆಬ್ಬಾರ್ ಆದೇಶ
ಗಮನಾರ್ಹವಾಗಿ, 2026ರ ಐಪಿಎಲ್ ಹರಾಜಿನಲ್ಲಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು 9.2 ಕೋಟಿ ರೂಪಾಯಿಗೆ ಖರೀದಿಸಿತ್ತು. ಆದರೆ ಬಾಂಗ್ಲಾದೇಶದಲ್ಲಿ ನಡೆದ ಕೆಲ ಸಾಮಾಜಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಭಾರತೀಯ ಅಭಿಮಾನಿಗಳ ಆಕ್ರೋಶ ಹೆಚ್ಚಾಗಿತ್ತು. ಈ ಒತ್ತಡದ ನಡುವೆಯೇ ಬಿಸಿಸಿಐ, ಕೆಕೆಆರ್‌ಗೆ ಮುಸ್ತಾಫಿಜುರ್ ಅವರನ್ನು ತಂಡದಿಂದ ಕೈಬಿಡುವಂತೆ ಸೂಚನೆ ನೀಡಿದೆ ಎಂಬ ಮಾಹಿತಿ ಹರಿದಾಡುತ್ತಿದೆ.
ಈ ನಿರ್ಧಾರದಿಂದ ಅಸಮಾಧಾನಗೊಂಡಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ, ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ತಂಡವನ್ನು ಕಳುಹಿಸದಿರುವ ಬಗ್ಗೆ ಐಸಿಸಿಯೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದೆ.

