August 31, 2026
Monday, August 31, 2026
spot_img

‘ಮೈ ಭಾರತ್’ ಜಿಲ್ಲಾ ಸಮಿತಿ ಸಭೆ: ಯುವಶಕ್ತಿ ಸದ್ಬಳಕೆಗೆ ಚಿತ್ರದುರ್ಗದ ಉಪವಿಭಾಗಾಧಿಕಾರಿ ಸಲಹೆ

ಹೊಸದಿಗಂತ ವರದಿ ಚಿತ್ರದುರ್ಗ

ಯುವಜನರ ವೈಯಕ್ತಿಕ ಪ್ರಗತಿ ಹಾಗೂ ರಾಷ್ಟ್ರ ನಿರ್ಮಾಣದ ಚಟುವಟಿಕೆಗಳಲ್ಲಿ ಯುವಶಕ್ತಿಯನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲು ‘ಮೈ ಭಾರತ್ ವೇದಿಕೆಯು ಅತ್ಯುತ್ತಮ ಅವಕಾಶ ಒದಗಿಸಲಿದೆ ಎಂದು ಉಪವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ‘ಮೈ ಭಾರತ್’ ಯೋಜನೆಯ ಜಿಲ್ಲಾ ಸಲಹಾ ಸಮಿತಿ (ಡಿಎಸಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯುವಜನರಲ್ಲಿ ನಾಯಕತ್ವ ಗುಣ ಬೆಳಸಲು, ಸ್ವಯಂಸೇವೆ, ಕೌಶಲ್ಯ ಅಭಿವೃದ್ಧಿ ಹಾಗೂ ಸಮುದಾಯ ಸೇವೆಯಲ್ಲಿ ತೊಡಗಿಸಿಕೊಳ್ಳಲು ಈ ವೇದಿಕೆ ಪ್ರಮುಖ ಪಾತ್ರವಹಿಸಲಿದೆ. ೧೫ ರಿಂದ ೨೯ ವರ್ಷದೊಳಗಿನ ಯುವಕ-ಯುವತಿಯರು ‘ಮೈ ಭಾರತ್’ ಫೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು ಸರ್ಕಾರದ ವಿವಿಧ ಸೌಲಭ್ಯಗಳು ಮತ್ತು ಅವಕಾಶಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜಿಲ್ಲೆಯಾದ್ಯಂತ ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಲ್ಲಿ ಶೀಘ್ರವೇ ‘ಮೈ ಭಾರತ್’ ನೋಂದಣಿ ಅಭಿಯಾನ ಆರಂಭಿಸಲಾಗುವುದು. ಅರ್ಹ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಅಗತ್ಯ ಸೌಲಭ್ಯ ಕಲ್ಪಿಸುವಂತೆ ಶಿಕ್ಷಣ ಸಂಸ್ಥೆಗಳಿಗೆ ಸಭೆಯಲ್ಲಿ ಸೂಚನೆ ನೀಡಲಾಯಿತು.

‘ನಶಾ ಮುಕ್ತ ಭಾರತ್ ಅಭಿಯಾನ’, ’ವಿಕಸಿತ ಭಾರತ್ ಯುವ ನಾಯಕರ ಸಂವಾದ’, ’ವೈಬ್ರೆಂಟ್ ವಿಲೇಜ್’ ಕಾರ್ಯಕ್ರಮ ಸೇರಿದಂತೆ ಯುವಜನರ ಅಭಿವೃದ್ಧಿಗಾಗಿ ಹಮ್ಮಿಕೊಳ್ಳಲಾದ ಸಾಮಾಜಿಕ ಕಲ್ಯಾಣ ಮತ್ತು ಸಮುದಾಯ ಸಬಲೀಕರಣ ಚಟುವಟಿಕೆಗಳ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.

ಇದನ್ನೂ ಓದಿ:

ಮೇರಾ ಯುವ ಭಾರತ್ ಜಿಲ್ಲಾ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಯುವಜನ ಅಧಿಕಾರಿ ಧನಂಜಯ್ ಜಗತಾಪ್ ಅವರು, ‘ಮೈ ಭಾರತ್’ ಫೋರ್ಟಲ್‌ನ ಉದ್ದೇಶಗಳು ಮತ್ತು ಪ್ರಸ್ತುತ ನಡೆಯುತ್ತಿರುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸುಚೇತಾ ನೆಲವಗಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಎಂ.ಪಿ.ಪ್ರವೀಣ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯ ಪ್ರಧಾನ ಕಾರ್ಯದರ್ಶಿ ಮಜಹರ್ ಉಲ್ಲಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !