ಹೊಸದಿಗಂತ ವರದಿ ಮೈಸೂರು:
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಸಿದ್ಧತೆಯನ್ನು ಕಾಂಗ್ರೆಸ್ ಆರಂಭಿಸಿದೆ. ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿ, ಘೋಷಿಸುವ ತೀರ್ಮಾನವನ್ನು ಹೈಕಮಾಂಡ್ ನಿರ್ಧಾರಕ್ಕೆ ಬಿಡಲಾಗಿದ್ದು, ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಲು ಸೋಮವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುತ್ತಿರುವ ಸಾಮಾನ್ಯ ಕಾರ್ಯಕರ್ತನಿಗೆ ಈ ಬಾರಿಯ ಮೈಸೂರು-ಕೊಡಗು ಲೋಕಸಭಾ ಟಿಕೇಟ್ ನೀಡಬೇಕೆಂಬ ಒಮ್ಮತದ ಅಭಿಪ್ರಾಯ ಕೇಳಿ ಬಂದಿತು. ಅಲ್ಲದೇ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಪಕ್ಷದ ವರಿಷ್ಠರಿಗೆ ತಲುಪಿಸಿ, ಸೂಕ್ತ ಅಭ್ಯರ್ಥಿಯ ಆಯ್ಕೆ ಮಾಡುವ ನಿರ್ಧಾರವನ್ನು ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬಿಡಲಾಯಿತು.
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಿಕೊಂಡು ಹೋಗಲು ನಿರ್ಧರಿಸಲಾಯಿತು. ಸಭೆಯಲ್ಲಿ ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಕೊಡಗು ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸವರಾಜು, ಮಾಜಿ ಮಹಾಪೌರ ಅಯೂಬ್ ಖಾನ್, ಪುಷ್ಪಲತಾ ಚಿಕ್ಕಣ್ಣ, ನಗರಪಾಲಿಕೆ ಸದಸ್ಯರಾದ ಶೋಭಾ ಸುನೀಲ್, ಲತಾ ಸಿದ್ದ ಶೆಟ್ಟಿ ಮತ್ತಿತರರು ಹಾಜರಿದ್ದರು.