ಹೊಸ ದಿಗಂತ ವರದಿ,ಬೀದರ್:
ಜಿಲ್ಲೆಯ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡ ಕಾರಣ ಈ ವೇಳೆ ಶಾಲೆಗೆ ತೆರಳುತ್ತಿದ್ದ ಮಕ್ಕಳ ಸಹಿತ ಆರು ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದು ಘಟನೆಯ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ತೀವ್ರ ಆಘಾತ ವ್ಯಕ್ತಪಡಿಸುತ್ತ ಘಟನೆಯ ಕುರಿತು ಸೂಕ್ತ ತನಿಖೆಗೆ ಆದೇಶಿಸಿದ್ದಾರೆ.
ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಹಾಗೂ ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತವೇ ಭರಿಸುವಂತೆ ಸಚಿವ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸ್ಫೋಟಕ ಪರೀಕ್ಷಾ ತಜ್ಞರನ್ನು ತಕ್ಷಣವೇ ಸ್ಥಳಕ್ಕೆ ಕಳುಹಿಸಿ, ಸ್ಫೋಟ ಸ್ಥಳದಿಂದ ಅಗತ್ಯ ಮಾದರಿಗಳನ್ನು ಸಂಗ್ರಹಿಸಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.
ಸ್ಫೋಟಕ್ಕೆ ನಿಖರ ಕಾರಣವೇನು, ಸ್ಫೋಟಕ್ಕೆ ಬಳಸಲಾದ ವಸ್ತು ಯಾವುದು, ಆ ವಸ್ತು ಅಲ್ಲಿಗೆ ಹೇಗೆ ಬಂದಿದೆ ಹಾಗೂ ಯಾವ ಉದ್ದೇಶಕ್ಕಾಗಿ ಅದನ್ನು ಬಳಸಲಾಗಿದೆ ಎಂಬ ಎಲ್ಲ ಅಂಶಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಸೂಚಿಸಿದ್ದಾರೆ. ಘಟನೆಗೆ ಕಾರಣರಾದವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆಯೂ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ ನೀಡಿದ್ದಾರೆ.



