ಹೊಸದಿಗಂತ ವರದಿ, ಮೈಸೂರು:
ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಕಳೆದ 10 ದಿನಗಳಿಂದ ನಗರದ ಪುರಭವನದ ಮುಂಭಾಗ ಕಾವೇರಿ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿರ್ವಹಣ ಮಂಡಳಿಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ನಡೆಸಲಾಗುತ್ತಿದ್ದ ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಎಸ್.ಜಯಪ್ರಕಾಶ್ (ಜೆಪಿ) ತಿಳಿಸಿದರು.
ಶುಕ್ರವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಿಳುನಾಡಿಗೆ ಪದೇ ಪದೇ ಕಾವೇರಿ ನೀರು ಬಿಡುವಂತೆ ಆದೇಶಿಸುತ್ತಿರುವ ಕಾವೇರಿ ನೀರು ಪ್ರಾಧಿಕಾರ ಹಾಗೂ ಕಾವೇರಿ ನೀರು ನಿರ್ವಹಣ ಮಂಡಳಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಲೇ ಬಂದಿದ್ದು, ತಮಿಳುನಾಡಿನ ಏಜೆಂಟ್‌ರoತೆ ವರ್ತಿಸುತ್ತಿದೆ. ಹಾಗಾಗಿ ಈ ಎರಡನ್ನೂ ಕೂಡಲೇ ರಾಷ್ಟçಪತಿಗಳು ರದ್ದು ಮಾಡಬೇಕೆಂದು ಮೈಸೂರಿನ ಪುರಭವನದ ಮುಂದೆ ಕಳೆದ 10 ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿತ್ತು. ಇದರಲ್ಲಿ 24ಕ್ಕೂ ಹೆಚ್ಚು ವಿವಿಧ ಸಂಘ, ಸಂಸ್ಥೆಗಳು ಭಾಗವಹಿಸುವ ಮೂಲಕ ಬೆಂಬಲ ನೀಡಿವೆ. ರಾಜ್ಯ ಸರ್ಕಾರ ರಾಜ್ಯದ ರೈತರ ಹಿತ ಕಾಯುವಲ್ಲಿ ವಿಫಲವಾಗಿದೆ. ಕಾವೇರಿ ನೀರಿನ ವಿಚಾರದಲ್ಲಿ ನಿರ್ಲಪ್ತ ಭಾವ ಪ್ರದರ್ಶಿಸುತ್ತಿದೆ ಎಂದು ಕಿಡಿಕಾರಿದರು.
ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಅ.15 ರಿಂದ ಆರಂಭವಾಗುತ್ತಿದೆ. ದೇಶ, ವಿದೇಶಗಳಿಂದ ಲಕ್ಷಾಂತರ ಮಂದಿ ಪ್ರವಾಸಿಗರು ಮೈಸೂರಿಗೆ ಬರುತ್ತಿದ್ದಾರೆ. ಹಾಗಾಗಿ ನಮ್ಮ ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆ. ಆದರೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದೆ ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಸಮಿತಿಯು ಧರಣಿ ನಡೆಸುತ್ತಿದ್ದ ಸ್ಥಳದಲ್ಲಿ ದಸರಾಗೆ ಬರುವ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ವಿತರಿಸಲಾಗುವುದು ಎಂದು ತಿಳಿಸಿದರು.
ರಾಜ್ಯ ಸರ್ಕಾರ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಕಾಟಾಚಾರಕ್ಕೆ ಆಚರಿಸಬಾರದು. ಶ್ರದ್ಧಾ ಭಕ್ತಿಯಿಂದ ಮಾಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಮುಖಂಡರುಗಳಾದ ಸ.ರ.ಸುದರ್ಶನ, ಮಾನಸ, ಮೋಹನ್‌ಕುಮಾರ್‌ಗೌಡ, ತೇಜಸ್ ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.