ಕೋವಿಡ್ ನೆಪದಲ್ಲಿ ಹಣ ದುರುಪಯೋಗ: ನಲಪಾಡ್ ಆರೋಪ

ಹೊಸದಿಗಂತ ವರದಿ ಮಡಿಕೇರಿ: 

ಕೋವಿಡ್ ನೆಪದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಹಣ ದುರುಪಯೋಗ ಮಾಡಿದೆ. ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವಲ್ಲಿಯೂ ವಿಫಲವಾಗಿದೆ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಸಂದರ್ಭ ಸರ್ಕಾರ ತೆಗೆದುಕೊಂಡ ತಪ್ಪು ನಿರ್ಧಾರಗಳಿಂದ ದೇಶದ ಸುಮಾರು 2 ಕೋಟಿ ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ. ಇದೀಗ ಮತ್ತೆ ಹಣಗಳಿಸುವ ಉದ್ದೇಶದಿಂದ ನಾಲ್ಕನೇ ಅಲೆಯ ಭಯ ಹುಟ್ಟಿಸಲಾಗುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಕೋವಿಡ್‌ನಿಂದಾಗಿ 4.7 ಲಕ್ಷ ಜನರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ. ಆದರೆ ವಿಶ್ವ ಆರೋಗ್ಯ ಸಂಸ್ಥೆ ವರದಿ ಪ್ರಕಾರ ಭಾರತದಲ್ಲಿ 47 ಲಕ್ಷ ಜನರು ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಹಾರ ನೀಡದೆ ವಂಚಿಸಿದೆ ಎಂದು ಟೀಕಿಸಿದರು.

ಕಾಮಗಾರಿಗಳಲ್ಲಿ ಶೇ.40 ರಷ್ಟು ಕಮಿಷನ್ ದಂಧೆ ನಡೆಯುತ್ತಿರುವುದು ಈಗಾಗಲೇ ಖಾತ್ರಿಯಾಗಿದೆ. ಕೊಡಗಿನಲ್ಲೂ ಭ್ರಷ್ಟಾಚಾರ ಮಿತಿ ಮೀರಿದೆ, ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಆರೋಪಿಸಿದ ನಲಪಾಡ್, ಯುವ ಕಾಂಗ್ರೆಸ್ ಕಾರ್ಯಕರ್ತರು ಬೆದರಿಕೆಗೆ ಬಗ್ಗಲ್ಲ, ಕಾರ್ಯಕರ್ತರ ಹಿಂದೆ ನಾನಿದ್ದೇನೆ ಎಂದರು. ಸರ್ಕಾರ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಜಿಲ್ಲಾ ಮಾಜಿ ಅಧ್ಯಕ್ಷ ಹನೀಫ್, ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶಿರಾಜ್ ಹಾಗೂ ಪ್ರಮುಖರಾದ ಅಶ್ರಫ್ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!