ಹೊಸದಿಗಂತ ವರದಿ, ಮಂಗಳೂರು:
ಯುದ್ಧ ಪೀಡಿತ ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳ ಮನೆಗೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್ ಬುಧವಾರ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು.
ವಿದ್ಯಾರ್ಥಿಗಳ ಜತೆ ವಿಡಿಯೋ ಕಾಲ್ ಮೂಲಕ ಮಾತನಾಡಿ , ಸುರಕ್ಷಿತವಾಗಿ ಕರೆತರಲು ಕೇಂದ್ರ ಸರಕಾರ ಎಲ್ಲ ವ್ಯವಸ್ಥೆ ಮಾಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ನಳಿನ್, ದ.ಕ.ಜಿಲ್ಲೆಯ18 ಮಂದಿ ಉಕ್ರೇನ್ ನಲ್ಲಿ ಸಿಲುಕಿರುವ ಬಗ್ಗೆ ಅಧಿಕೃತ ಮಾಹಿತಿ ದೊರೆತಿದೆ. ಈಗಾಗಲೇ ನಾಲ್ಕೈದು ವಿದ್ಯಾರ್ಥಿಗಳು ಸಮೀಪದ ದೇಶಗಳನ್ನು ತಲುಪಿದ್ದು ಅವರನ್ನು ವಾಪಸ್ ಕರೆತರಲಾಗುತ್ತಿದೆ ಎಂದರು.
ಎಲ್ಲ ವಿದ್ಯಾರ್ಥಿಗಳ ಪೋಷಕರ ಜತೆ ಮಾತನಾಡಲಾಗುತ್ತಿದೆ. ವಿದ್ಯಾರ್ಥಿಗಳ ಜತೆಗೂ ಸಂಪರ್ಕದಲ್ಲಿ ಇದ್ದೇವೆ. ಇದಕ್ಕಾಗಿ ಬಿಜೆಪಿಯಿಂದ ಪ್ರತ್ಯೇಕ ವಾರ್ ರೂಂ ಆರಂಭಿಸಲಾಗಿದೆ. ಶಾಸಕ ವೇದವ್ಯಾಸ ಕಾಮತ್ ವಿದ್ಯಾರ್ಥಿಗಳ ಜತೆ ಸಂಪರ್ಕದಲ್ಲಿದ್ದು, ಮಾಹಿತಿ ಪಡೆಯುತ್ತಿದ್ದಾರೆ. ವಿದೇಶಾಂಗ ಇಲಾಖೆ ಜತೆಗೂ ಸಂಪರ್ಕದಲ್ಲಿದ್ದು, ಎಲ್ಲ ವಿದ್ಯಾರ್ಥಿಗಳನ್ನು ಸುರಕ್ಷಿತ ವಾಗಿ ಕರೆತರಲಾಗುವುದು ಎಂದರು.
ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಮುಖಂಡರು ಜತೆಗಿದ್ದರು.