ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………
ಹೊಸ ದಿಗಂತ ವರದಿ, ಮಂಗಳೂರು:
ಮಂಗಳೂರಿನ ಬಿಜೆಪಿ ಕಚೇರಿಗೆ ಬರುವುದೆಂದರೆ ಮನಗೆ ಬಂದಂತೆ. ಇಲ್ಲಿ ಪ್ರತಿ ಬಾರಿ ಬರುವಾಗಲು ನಮ್ಮದೇ ಮನೆಗೆ ಬಂದ ಅನುಭವವಾಗುತ್ತದೆ. ಜಿಲ್ಲೆಯಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರ ಶ್ರಮ ಮಹತ್ತರವಾದುದು ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.
ಸೋಮವಾರ ಮಂಗಳೂರಿನ ಕೊಡಿಯಾಲ್ಬೈಲ್ನಲ್ಲಿರುವ ದ.ಕ.ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಚಿವರು, ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಯುವಜನಾಂಗದ ಸಬಲೀಕರಣಕ್ಕೆ ಪೂರಕವಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡುವಲ್ಲಿ ದಿಟ್ಟ ಹೆಜ್ಜೆ ಇರಿಸಿಸಲಾಗಿದೆ. ಈ ನಿಟ್ಟಿನಲ್ಲಿ ಇತರ ರಾಜ್ಯಗಳಿಗಿಂತ ಕರ್ನಾಟಕವೇ ಮುಂಚೂಣಿಯಲ್ಲಿದೆ. ಸತತ ಏಳು ವರ್ಷಗಳ ಬಳಿಕ ಸುಧಾರಣೆ ಕಂಡು ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನವಾಗುತ್ತಿದೆ ಎಂದವರು ಹೇಳಿದರು.
ಇದೇ ಸಂದರ್ಭ ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಎಂ ಅವರು ಸಚಿವರನ್ನು ಶಾಲು ಹೊದಿಸಿ, ಹಾರಾರ್ಪಣೆಯೊಂದಿಗೆ ಗೌರವಿಸಿದರು.
ಈ ಸಂದರ್ಭ ಮೂಡ ಅಧ್ಯಕ್ಷ ರವಿಶಂಕರ ಮಿಜಾರ್, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ವಿಧಾನ ಪರಾಷತ್ ಮಾಜಿ ಸದಸ್ಯ ಕೆ.ಮೋನಪ್ಪ ಭಂಡಾರಿ, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ನ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ ಶೇಣವ, ಮಂಗಳೂರು ದಕ್ಷಿಣ ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಪ್ರಧಾನಕಾರ್ಯದರ್ಶಿ ರೂಪಾ ಡಿ.ಬಂಗೇರ, ಪ್ರಮುಖರಾದ ಸುವೃತ್ ಕುಮಾರ್, ರಾಮ ಅಮೀನ್ ಪಚ್ಚನಾಡಿ, ಪೂರ್ಣಿಮಾ, ಲಲ್ಲೇಶ್, ರಮೇಶ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.