ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೇತೃತ್ವದ “ಸೇಡು ರಾಜಕಾರಣ”ದ ಮುಂದುವರಿಕೆ ಇದಾಗಿದ್ದು, ವಿರೋಧ ಪಕ್ಷದ ಧ್ವನಿಯನ್ನು ಅಡಗಿಸಲು ಇಡಿಯನ್ನು ರಾಜಕೀಯ ಅಸ್ತ್ರವಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
“ಕೇಂದ್ರ ಸರ್ಕಾರಕ್ಕೆ ಸಿಂಹಸ್ವಪ್ನವಾಗಿರುವ ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯ ಕ್ರಮವು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕೀಯದ ಮುಂದುವರಿಕೆಯಾಗಿದೆ” ಎಂದು ಸಿದ್ದರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
“ಇದು ನಮ್ಮ ಪಕ್ಷದ ಅಥವಾ ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕರ ವಿರುದ್ಧ ಸೇಡು ತೀರಿಸಿಕೊಳ್ಳುವ ಕ್ರಮ ಮಾತ್ರವಲ್ಲ, ವಿರೋಧ ಪಕ್ಷಗಳು ಮತ್ತು ದೇಶದ ಪ್ರಜಾಪ್ರಭುತ್ವ ಪ್ರಿಯ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆ ಇದು, ವಿರೋಧ ಪಕ್ಷದ ಧ್ವನಿಯನ್ನು ಸಹಿಸಲಾಗುವುದಿಲ್ಲ. ದ್ವೇಷದ ರಾಜಕೀಯವನ್ನು ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷವು ಸತ್ಯ ಮತ್ತು ನ್ಯಾಯದ ಬಲದಿಂದ ಇದನ್ನು ಎದುರಿಸಲಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.