ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದ ಪರಿಣಾಮ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ಯೋಧರೊಬ್ಬರು ಹುತಾತ್ಮರಾಗಿ, ಮೂವರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಡಿಆರ್‌ಜಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಭಾನುವಾರದಿಂದ ಕಾರ್ಯಾಚರಣೆ ಆರಂಭವಾಗಿತ್ತು, ಇಂದು ಬೆಳಗ್ಗೆ ಕೂಡ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ವೇಳೆ ಐಇಡಿ ಸ್ಫೋಟ ಗೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಹುತಾತ್ಮ ಯೋಧನನ್ನು ದಿನೇಶ್ ನಾಗ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಮೂವರು ಸಿಬ್ಬಂದಿಗೆ ಸ್ಥಳದಲ್ಲಿ ತಕ್ಷಣದ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಪ್ರಸ್ತುತ ಅವರನ್ನು ದಟ್ಟ ಅರಣ್ಯ ಪ್ರದೇಶದಿಂದ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.