ಹೊಸದಿಗಂತ ವರದಿ ಬೆಳಗಾವಿ:
ರಾಜ್ಯ ವಿಧಾನಪರಿಷತ್ತಿನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಬುಧವಾರ ವಿಜಯೋತ್ಸವ ಆಚರಿಸಿದರು.

ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿಯ ಬಳಿಕ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರ ನೇತೃತ್ವದಲ್ಲಿ ಸಂಭ್ರಮಾಚರಣೆಯಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸೇರಿ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚುವ ಮೂಲಕ ಎನ್‌ಡಿಎ ಅಭ್ಯರ್ಥಿಗಳ ಗೆಲುವನ್ನು ಸಂಭ್ರಮಿಸಿದರು. ‘ಭಾರತ್ ಮಾತಾಕಿ ಜೈ’ಎಂಬ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ತಮ್ಮ ಹರ್ಷವನ್ನು ವ್ಯಕ್ತಪಡಿಸಿದರು.
ರಾಜ್ಯ ವಿಧಾನಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಮೈತ್ರಿಕೂಟದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಆಡಳಿತಾರೂಢ ಕಾಂಗ್ರೆಸ್‌ಗೆ ಈ ಫಲಿತಾಂಶ ಹಿನ್ನಡೆಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚೆ ಜೋರಾಗಿದೆ.
ಇದನ್ನೂ ಓದಿ:
ವಿಜಯೋತ್ಸವದಲ್ಲಿ ಮಾಜಿ ಶಾಸಕ ಸಂಜಯ್ ಪಾಟೀಲ, ಅನಿಲ್ ಬೆನಕೆ, ಮಾಜಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮೇಯರ್ ಪ್ರೀತಿ ಕಾಮಕರ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಹಾಗೂ ಗೆಲುವಿನ ಸಂಭ್ರಮವನ್ನು ಹಂಚಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಪಟಾಕಿಗಳ ಸದ್ದು ಮತ್ತು ಘೋಷಣೆಗಳ ನಡುವೆ ನಡೆದ ವಿಜಯೋತ್ಸವವು ಬೆಳಗಾವಿಯಲ್ಲಿ ರಾಜಕೀಯ ಚಟುವಟಿಕೆಗೆ ಮತ್ತಷ್ಟು ಕಳೆ ತಂದುಕೊಟ್ಟಿದೆ ಎಂದು ಬಿಜೆಪಿಗರು ಮಾತನಾಡಿಕೊಂಡರು.



