ಹೊಸದಿಗಂತ ವರದಿ, ಚಿತ್ರದುರ್ಗ
ಪದೇ ಪದೇ ಕಚೇರಿ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗುವುದು ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕಾಗಿ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಅರುಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.
ಮೊಳಕಾಲ್ಮುರು ತಾ.ಪಂ ವ್ಯವಸ್ಥಾಪಕ ಅರುಣ್ ಕುಮಾರ್ ಅವರು ೨೦೨೪ರ ಆಗಸ್ಟ್ ೦೮ ರಿಂದ ೧೩ ರವರೆಗೆ ಅನಧಿಕೃತ ಗೈರು ಹಾಜರಾಗಿದ್ದು, ಈ ಕುರಿತಂತೆ ನೌಕರರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿರುತ್ತದೆ. ಮುಂದುವರೆದು ೨೦೨೪ರ ಆಗಸ್ಟ್ ೧೪ ರಿಂದ ೨೧ ರವರೆಗೆ ಮೇಲಾಧಿಕಾರಿಗಳ ಅನುಮತಿ ಪಡೆಯದೇ ಪುನಃ ಕರ್ತವ್ಯಕ್ಕೆ ಗೈರು ಹಾಜರಾಗಿರುತ್ತಾರೆ. ಈ ನೌಕರರು ಮೇಲಾಧಿಕಾರಿಗಳ ಅನುಮತಿ ಪಡೆಯದೇ ಪದೇ ಪದೇ ಕರ್ತವ್ಯಕ್ಕೆ ಗೈರು ಹಾಜರಾಗಿರುವುದರಿಂದ ಈ ನೌಕರರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಮೊಳಕಾಲ್ಮುರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ವರದಿ ಸಲ್ಲಿಸಿರುತ್ತಾರೆ.
ಈ ಎಲ್ಲ ಅಂಶಗಳನ್ನು ಪರಿಶೀಲಿಸಿ, ಕೆಸಿಎಸ್ (ಸಿ.ಸಿ.ಎ) ನಿಯಮಾವಳಿ-೧೯೫೭ರ ನಿಯಮ-೧೦(೧) ರನ್ವಯ ಮೊಳಕಾಲ್ಮುರು ತಾ.ಪಂ ವ್ಯವಸ್ಥಾಪಕ ಅರುಣ್ ಕುಮಾರ್ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿದ್ದು, ಅಮಾನತು ಅವಧಿಯಲ್ಲಿ ಪ್ರಾಧಿಕಾರದ ಅನುಮತಿ ಪಡೆಯದೇ ಕೇಂದ್ರಸ್ಥಾನ ಬಿಡುವಂತಿಲ್ಲ ಮತ್ತು ಅನ್ಯ ಉದ್ಯೋಗದಲ್ಲಿ ತೊಡಗುವಂತಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.