ಹೊಸದಿಗಂತ, ಮಂಗಳೂರು:
ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಉಡುಪಿ ಜಿಲ್ಲೆ ನೇಜಾರಿನ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್ ಚೌಗಲೆ ವಿರುದ್ಧ ಪೊಲೀಸರು ಸಲ್ಲಿಸಿರುವ ದೋಷಾರೋಪಣಾ ಪಟ್ಟಿಯನ್ನು ಮಾನ್ಯ ಮಾಡಿರುವ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಆರಂಭಿಸಲು ಪ್ರಕರಣವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಗುರುವಾರ ಒಪ್ಪಿಸಿದೆ.
ಇಲ್ಲಿನ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿಯ ಪರಿಶೀಲನೆ ಪೂರ್ಣಗೊಂಡ ಬಳಿಕ 15 ಸಂಪುಟಗಳ 2202 ಪುಟಗಳ ದೋಷಾ ರೋಪಣಾ ಪಟ್ಟಿಯನ್ನು ವಕೀಲರಿಗೆ ನೀಡಲಾಗಿದೆ.
ಗುರುವಾರ ನಡೆದ ಈ ಬೆಳವಣಿಗೆ ಸಂದರ್ಭ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಹಾಗೂ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ.ನದಾಫ್ ಹಾಜರಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ಈ ಸಂದರ್ಭ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.