ನಾಳೆ ನೂತನ ಸಿಎಂ, ಡಿಸಿಎಂ ಪ್ರಮಾಣವಚನ: ಅನ್ಯ ರಾಜ್ಯಗಳ ಸಿಎಂಗಳಿಗೆ ಕಾಂಗ್ರೆಸ್ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಾಳೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಇದಕ್ಕಾಗಿ ಬೆಂಗಳೂರು ನಗರದಲ್ಲಿರುವ ಕಂಠೀರವಣ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ಸಮಾರಂಭದಲ್ಲಿ ದೇಶದ ವಿವಿಧ ಗಣ್ಯರು ಭಾಗಿಯಾಗುವ ಸಾಧ್ಯತೆ ಇದೆ. ಇನ್ನು ಬೇರೆ ರಾಜ್ಯಗಳ ಸಿಎಂಗಳಿಗೂ ಕಾಂಗ್ರೆಸ್ ಆಹ್ವಾನಿಸಿದೆ.

ಕರ್ನಾಟಕದ ನೂತನ ಸಿಎಂ, ಡಿಸಿಎಂ ಪ್ರಮಾಣವಚನ ಸಮಾರಂಭಕ್ಕೆ ಕಾಂಗ್ರೆಸ್ ಹಾಗೂ ಕಾಂಗ್ರೆಸ್ಸೇತರ ನಾಯಕರಿಗೆ ಆಹ್ವಾನಿಸಲಾಗಿದ್ದು, ಶರದ್ ಪವಾರ್​​ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಹ್ವಾನ ನೀಡಿದ್ದಾರೆ. ಅದೇ ರೀತಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಆಗಮಿಸುವ ಸಾಧ್ಯತೆ ಇದೆ. ಹೀಗಾಗಿ ಅಲ್ಲಿನ ಅಧಿಕಾರಿಗಳು ಬೆಂಗಳೂರಿಗೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್ ಸಿಂಗ್ ಸುಖು, ಛತ್ತೀಸಗಢ ಸಿಎಂ ಭೂಪೇಶ್ ಬಾಘೆಲ್, ಬಿಹಾರ್ ಸಿಎಂ ನಿತೀಶ್ ಕುಮಾರ್, ತಮಿಳು ನಾಡು ಸಿಎಂ ಎಂ.ಕೆ ಸ್ಟಾಲಿನ್ ಸೇರಿದಂತೆ ನೆರೆಹೊರೆಯ ರಾಜ್ಯಗಳ ಕಾಂಗ್ರೆಸ್ ಮತ್ತಿತರ ಪಕ್ಷಗಳ ಮುಖಂಡರು ಪಾಲ್ಗೊಳ್ಳುವ ಸಾಧ್ಯತೆ ಇದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೂ ಆಹ್ವಾನ ನೀಡಲಾಗಿದ್ದು, ಅವರು ತಮ್ಮ ಪರವಾಗಿ ಪ್ರತಿನಿಧಿಯನ್ನು ಕಳುಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಾಂಗ್ರೆಸ್‌ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!