February 16, 2026
Monday, February 16, 2026
spot_img

ಸಾವಿನ ಮನೆಯಾದ ಹೊಸ ಮನೆ: ಗೋಡೆ ಕುಸಿದು ಇಬ್ಬರು ಕಾರ್ಮಿಕರ ದುರ್ಮರಣ

ಹೊಸದಿಗಂತ ಗದಗ:

ಜಿಲ್ಲೆಯ ನರಗುಂದ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಹಳೆಯ ಮನೆಯ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಸಂಭವಿಸಿದೆ.

ಗ್ರಾಮದ ಯಲ್ಲಪ್ಪ ಕೆಳಗೇರಿ ಎಂಬುವವರು ತಮ್ಮ ಹಳೆಯ ಮನೆಯನ್ನು ಕೆಡವಿ ಅದೇ ಜಾಗದಲ್ಲಿ ಹೊಸ ಮನೆ ನಿರ್ಮಿಸಲು ಮುಂದಾಗಿದ್ದರು. ಈ ಕಾಮಗಾರಿಯಲ್ಲಿ ತೊಡಗಿದ್ದ ನಾಗಪ್ಪ ದೊಡ್ಡಮನಿ (60) ಹಾಗೂ ಶೇಖಪ್ಪ ಪರಸಪ್ಪನವರ್ (55) ಎಂಬ ಕಾರ್ಮಿಕರ ಮೇಲೆ ಹಳೆಯ ಮನೆಯ ಗೋಡೆ ಏಕಾಏಕಿ ಕುಸಿದು ಬಿದ್ದಿದೆ.

ಗೋಡೆ ಕುಸಿಯುತ್ತಿದ್ದಂತೆ ಮಣ್ಣಿನ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಇಬ್ಬರನ್ನೂ ತಕ್ಷಣವೇ ಹೊರತೆಗೆದು ನರಗುಂದದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟರಲ್ಲಾಗಲೇ ತೀವ್ರವಾಗಿ ಗಾಯಗೊಂಡಿದ್ದ ಕಾರ್ಮಿಕರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ದುರಂತ ನಡೆದ ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !