September 21, 2026
Monday, September 21, 2026
spot_img

ರಾಮಮಂದಿರ ದೇಣಿಗೆ ಕಳವು ಪ್ರಕರಣಕ್ಕೆ ಹೊಸ ಟ್ವಿಸ್ಟ್: ಬರೋಬ್ಬರಿ 105 ಬಾರಿ ನಡೆದಿತ್ತು ಕಳ್ಳತನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳವು ಆರೋಪದ ತನಿಖೆಯಲ್ಲಿ ಮಹತ್ವದ ಸಂಗತಿಗಳು ಬಹಿರಂಗಗೊಂಡಿವೆ.

ಹೌದು! ದೇವಾಲಯದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಒಟ್ಟು 105 ಬಾರಿ ದೇಣಿಗೆ ಕಳವು ನಡೆದಿರುವುದು ಪತ್ತೆಯಾಗಿದೆ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ವರದಿಯಲ್ಲಿ ತಿಳಿಸಲಾಗಿದೆ.

ಸೋಮವಾರ ನಡೆದ ವಿಚಾರಣೆಯಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಎಸ್‌ಐಟಿ ವರದಿಯ ಪ್ರಮುಖ ಅಂಶಗಳನ್ನು ನ್ಯಾಯಪೀಠದ ಗಮನಕ್ಕೆ ತಂದರು. ದೇಣಿಗೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳು, ಸಾಕ್ಷಿಗಳ ಹೇಳಿಕೆಗಳು ಹಾಗೂ ಇತರ ದಾಖಲೆಗಳನ್ನು ಎಸ್‌ಐಟಿ ಪರಿಶೀಲಿಸಿದೆ. ಈ ಸಾಕ್ಷ್ಯಗಳ ಆಧಾರದ ಮೇಲೆ ಪ್ರಕರಣದಲ್ಲಿ ಆರೋಪಿಗಳ ಗುರುತು ಪತ್ತೆಹಚ್ಚಲಾಗಿದೆ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸೆ 25ರೊಳಗೆ ಆರೋಪಪಟ್ಟಿ ಸಲ್ಲಿಕೆ

ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದ್ದು, ಸೆಪ್ಟೆಂಬರ್ 25ರೊಳಗೆ ಆರೋಪಪಟ್ಟಿ ಸಲ್ಲಿಸಲಾಗುವುದು ಎಂದು ತುಷಾರ್ ಮೆಹ್ತಾ ಅವರು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದರು. ಆರೋಪಪಟ್ಟಿ ಸಲ್ಲಿಕೆಯ ಬಳಿಕ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಮ್ಯಾಜಿಸ್ಟ್ರೇಟ್‌ಗೆ ಸೂಚಿಸಿದೆ.

ಇದನ್ನೂ ಓದಿ:

ದೇಣಿಗೆಯಾಗಿ ಬಂದ ಹಣ ಹಾಗೂ ಬೆಲೆಬಾಳುವ ವಸ್ತುಗಳ ನಿರ್ವಹಣೆ ಕುರಿತೂ ಎಸ್‌ಐಟಿ ಮಾಹಿತಿ ನೀಡಿದೆ. ವಸ್ತುಗಳಿಗೆ ಸಂಬಂಧಿಸಿದ ಸ್ವೀಕೃತಿ ರಸೀದಿಗಳನ್ನು ಸಾಫ್ಟ್‌ವೇರ್ ಮೂಲಕ ಸಿದ್ಧಪಡಿಸಲಾಗುತ್ತಿದ್ದು, ಅವುಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಲಾಕರ್‌ನಲ್ಲಿ ಸಂಗ್ರಹಿಸಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಎಸ್‌ಐಟಿ ವರದಿಯ ಪ್ರತಿಯನ್ನು ನೀಡುವಂತೆ ಮನವಿ ಮಾಡಿದರು. ಆದರೆ ಸುಪ್ರೀಂ ಕೋರ್ಟ್ ವರದಿಯ ಪ್ರತಿಯನ್ನು ನೀಡಲು ನಿರಾಕರಿಸಿತು. ಪ್ರಕರಣವನ್ನು ವಿಚಾರಣಾ ನ್ಯಾಯಾಲಯದ ಹಂತದಲ್ಲೇ ಮುಂದುವರಿಸಲು ಅವಕಾಶ ನೀಡುವುದಾಗಿ ನ್ಯಾಯಪೀಠ ತಿಳಿಸಿತು.

ಎಂಟು ಮಂದಿಯ ಬಂಧನ

ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ಎಂಟು ಮಂದಿಯನ್ನು ಆರೋಪಿಗಳಾಗಿ ಹೆಸರಿಸಲಾಗಿದ್ದು, ಅವರೆಲ್ಲರೂ ಬಂಧನದಲ್ಲಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !