ಮುಂದಿನದ್ದು ರಾಷ್ಟ್ರಭಕ್ತರು-ವಿರೋಧಿಗಳ ನಡುವಿನ ಚುನಾವಣೆ: ಬ್ರಿಜೇಶ್ ಚೌಟ

ಹೊಸದಿಗಂತ ವರದಿ ಮಡಿಕೇರಿ:

ಮುಂದಿನ ಚುನಾವಣೆ ರಾಷ್ಟ್ರಭಕ್ತರು ಮತ್ತು ರಾಷ್ಟ್ರವಿರೋಧಿಗಳ ನಡುವಿನ ಚುನಾವಣೆಯಾಗಲಿದ್ದು, ಜಿ.ಪಂ., ತಾ.ಪಂ.ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯೊಂದಿಗೆ ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕಿದೆ ಬಾರತೀಯ ಜನತಾ ಪಾರ್ಟಿ (ಬಿಜೆಪಿ)ಯ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ನುಡಿದರು.

ನಗರದ ಕಾವೇರಿ ಹಾಲ್’ನಲ್ಲಿ ಶುಕ್ರವಾರ ನಡೆದ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಮತ್ತು ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.
ಭಾರತ ಅಮೃತ ಕಾಲದತ್ತ ಮುನ್ನುಗ್ಗುತ್ತಿದೆ. ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು 2047ರ ವಿಕಸಿತ ಭಾರತಕ್ಕೆ ಮುನ್ನುಡಿಯಾಗಿ ಸಮಗ್ರವಾದ ಆಯವ್ಯಯ ಮಂಡಿಸಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು: ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು, ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದಿನ ಬಿಜೆಪಿ ಶಾಸಕದ್ವಯರು ಕಡಿದು ಕಟ್ಟೆಹಾಕಿದ್ದು ಏನೆಂದು ಪ್ರಶ್ನಿಸಿದ್ದಾರೆ.ಅದರೆ ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಕೊಡಗಿನ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.ಗಳ ಅನುದಾನ ತಂದಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯಲ್ಲಿ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದ ಕಾಮಗಾರಿಗಳು ನಾವು ಪ್ರಸ್ತಾವನೆ ಕಳಿಸಿ ಮಂಜೂರಾದ ಕಾಮಗಾರಿಗಳೇ ಹೊರತು ಕಾಂಗ್ರೆಸ್ ಶಾಸಕರದ್ದಾಗಲಿ, ಸರಕಾರದ್ದಾಗಲಿ ಅಲ್ಲ ಎಂದು ತಿರುಗೇಟು ನೀಡಿದರು.

ಕೊಡಗಿನಲ್ಲಿ ಮಡಿಕಲ್ ಕಾಲೇಜು, ಸೈನಿಕ ಶಾಲೆ, ವಿಶ್ವವಿದ್ಯಾನಿಲಯ ಸ್ಥಾಪನೆ ಮಾಡಿದ್ದು ಯಾರೆಂದು ಪ್ರಶ್ನಿಸಿದ ಅಪ್ಪಚ್ಚು ರಂಜನ್, ನಾವು ಮಾಡಿದ ಅಭಿವೃದ್ದಿ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆಗೆ ಸಿದ್ಧ ಎಂದು ಸವಾಲು ಹಾಕಿದರು.
ಕೊಡಗು ವಿಶ್ವವಿದ್ಯಾನಿಲಯಕ್ಕೆ ಬಿಜೆಪಿ ಸರಕಾರದ ಅವಧಿಯಲ್ಲಿ ನೇಮಕಗೊಳಿಸಿದ ಸಿಬ್ಬಂದಿಗಳನ್ನು ಈಗಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕೈಬಿಡುವ ಕೆಲಸವಾಗುತ್ತಿದೆ‌ ಎಂದೂ ಅವರು ಆರೋಪಿಸಿದರು.
ಇದೇ ಸಂದರ್ಭ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ರಾಬಿನ್ ದೇವಯ್ಯ ಅವರಿಂದ ನೂತನ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಲಾಯಿತು.

ಅಧಿಕಾರ ಸ್ವೀಕರಿಸಿ ಮಾತನಾಡಿದ ರವಿ ಕಾಳಪ್ಪ ಅವರು, ಬಹುದೊಡ್ಡ ಜವಾಬ್ದಾರಿಯನ್ನು ಪಕ್ಷದ ವರಿಷ್ಠರು ನನ್ನ ಹೆಗಲಿಗೆ ವಹಿಸಿದ್ದಾರೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ 22 ಮಂದಿ ಆಕಾಂಕ್ಷಿಗಳಾಗಿದ್ದರು. ಅವರೆಲ್ಲರೂ ಅರ್ಹರೇ‌ ಆಗಿದ್ದರೂ, ನಿಮ್ಮೆಲ್ಲರ ಒತ್ತಾಸೆಯಿಂದ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನನಗೆ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಎಲ್ಲರನ್ನೂ ಒಳಗೊಂಡು ಕಾರ್ಯಕ್ರಮ ರೂಪಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಕಾರ್ಯಕ್ರಮಗಳನ್ನು ಮತದಾರರ ಮನೆಮನೆಗೆ ತಲುಪಿಸಲು ಪ್ರಮುಖ ಅದ್ಯತೆ ನೀಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರಾದ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಉದಯಕುಮಾರ್ ಶೆಟ್ಟಿ, ರೀನಾ ಪ್ರಕಾಶ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರಾದ ರಾಬಿನ್ ದೇವಯ್ಯ, ಬಿ.ಬಿ.ಭಾರತೀಶ್, ಕೊಡಗು ಸಹಕಾರ ಯೂನಿಯನ್ ಅಧ್ಯಕ್ಷ ಮನು ಮುತ್ತಪ್ಪ, ನಗರ ಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ ಮತ್ತಿತರರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!